ತುಂಗೆಗೆ ಬಾಗಿನ ಅರ್ಪಿಸಿದ ಈಶ್ವರಪ್ಪ
ಶಿವಮೊಗ್ಗ: ಮೈತುಂಬಿ ಹರಿಯುತ್ತಿರುವ ತುಂಗೆಗೆ ಭಾನುವಾರ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಪತ್ನಿ ಜಯಲಕ್ಷ್ಮಿ ಬಾಗಿನ ಅರ್ಪಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿಗೆ ಮರಳುವ ಸಂಬಂಧವಾಗಿ ಸಾರ್ವಜನಿಕವಾಗಿ ಎಲ್ಲಿಯೂ ಮಾತನಾಡದಂತೆ ಕೇಂದ್ರ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬಿ.ಎಸ್. ಯಡಿಯೂಕರಪ್ಪ ಬಗ್ಗೆ ಚರ್ಚೆಯಾಗಲಿದೆಯೇ ಎಂಬ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೇಂದ್ರ ನಾಯಕರ ಸೂಚನೆಯನ್ನು ಎಲ್ಲರೂ ಪಾಲಿಸುತ್ತೇವೆ. ಯಡಿಯೂರಪ್ಪ ಬಗ್ಗೆ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆ. ಹಾಗಾಗೀ ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯ ಚರ್ಚಿಸುವುದಿಲ್ಲ ಎಂದರು. ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಸಲ್ಲಿಸುತ್ತೇವೆ. ನಂತರ ಕೇಂದ್ರ ನಾಯಕರು ಚರ್ಚೆ ಮಾಡಿ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಿದ್ದಾರೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಕೆ.ಜಿ. ಕುಮಾರಸ್ವಾಮಿ, ಆರ್.ಕೆ. ಸಿದ್ದರಾಮಣ್ಣ, ನಗರಸಭೆ ಮಾಜಿ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪಾಧ್ಯಕ್ಷ ರಾಮು ಮತ್ತಿತರರು ಇದ್ದರು.