ಬಾಲ ಕಾರ್ಮಿಕರನ್ನು ಮುಖ್ಯವಾಹಿನಿಗೆ ಕರೆತರಲು ಸೂಚನೆ
ಶಿವಮೊಗ್ಗ: ಅಪಾಯಕಾರಿ ಮತ್ತು ಅಪಾಯಕಾರಿಯಲ್ಲದ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14ವರ್ಷ ವಯೋವುತಿಯೊಳಗಿನ ಮಕ್ಕಳನ್ನು ಕಾರ್ಯಮುಕ್ತರನ್ನಾಗಿಸಿ, ಬಾಲ ಕಾರ್ಮಿಕ ಶಾಲೆಯ ಮೂಲಕ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಇತರ ಮೂಲ ಸೌಕರ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವಂತೆ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಬಾಲಕಾರ್ಮಿಕ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯನಿರ್ವಾಹಕ ಸಮಿತಿ ಸಭೆಯಲ್ಲಿ ಅವರು, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಮೂಲಕ ಅನುಷ್ಠಾನಗೊಂಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿದ ಅವರು ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬಾಲಕಾರ್ಮಿಕರ ಕುರಿತಾದ ಚಟುವಟಿಕೆಗಳು ಅಷ್ಟೊಂದು ಪರಿಣಾಮಕಾರಿಯಾಗಿ ನಡೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಬಾಲಕಾರ್ಮಿಕರನ್ನು ನಿಯಮಾನುಸಾರ ಗುರುತಿಸಿ, ಮುಖ್ಯವಾಹಿನಿಗೆ ಕರೆತರುವಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಮುಖ್ಯವಾಹಿನಿಗೆ: ಬಾಲಕಾರ್ಮಿಕರನ್ನು ನೇಮಿಸಿಕೊಳ್ಳುವ ಅಂಗಡಿಗಳು, ಹೋಟೆಲಲ್ಮತ್ತು ಗ್ಯಾರೇಜ್ಗಳ ಮೇಲೆ ದಿಢೀರ್ದಾಳಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು ಈಗಾಗಲೇ ಗುರುತಿಸಲಾದ ಬಾಲಕಾರ್ಮಿಕರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತಂದ ನಂತರ ಶಿಕ್ಷಣ ಮುಂದುವರೆಸುತ್ತಿರುವ ಮಕ್ಕಳ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪರಿಣಾಮಕಾರಿ ಅನುಷ್ಠಾನ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಕಾಂತ್ ಸೆಂಥಿಲ್ ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿಕರ ಸೇವೆಯನ್ನು ಬಳಸಿಕೊಳ್ಳುತ್ತಿರುವವರಿಗೆ ಅಧಿಕಾರಿಗಳು ಭಯದ ವಾತಾವರಣ ನಿರ್ಮಾಣ ಮಾಡಬೇಕು ಎಂದ ಅವರು ಬಾಲಕಾರ್ಮಿಕರ ಯೋಜನೆಗಳು ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಇರಬೇಕಾದ ಅಗತ್ಯವಿದೆ ಎಂದರು.
ಬಾಲಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಇರುವ ಬಾಲಕಾರ್ಮಿಕ ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆನೀಡಿದ ಅವರು ಅಧಿಕಾರಿಗಳೂ ಕೂಡ ವ್ಯವಸ್ಥಿತ ರೀತಿಯಲ್ಲಿ ದಾಖಲೆಗಳನ್ನು ಸಂಗ್ರಹಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ, ಬಾಲಕಾರ್ಮಿಕರನ್ನು ಹಿಡಿಯುವಲ್ಲಿ 445 ದಾಳಿಗಳನ್ನು ನಡೆಸಲಾಗಿದೆ. ಇದರಿಂದಾಗಿ ಈ ಯೋಜನೆಯ ಆರಂಭದಿಂದ ಈವರೆಗೆ ಜಿಲ್ಲೆಯಲ್ಲಿ 601ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲಾಗಿದೆ ಎಂದರು.
ಉಪವಿಭಾಗಾಧಿಕಾರಿ ಕುಸುಮಾ ಕುಮಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕಿ ಶಿವಗಾಮಿ, ಎಸ್.ಎನ್. ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಲಕ್ಷ್ಮೀಕಾಂತಮ್ಮ ಮತ್ತಿತರರು ಇದ್ದರು.