ಮೋದಿ ಆಯ್ಕೆ: ಬಿಜೆಪಿ ಸಂಭ್ರಮ
ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.9
ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಪಕ್ಷದ ಕಚೇರಿಯಲ್ಲಿ ಹಬ್ಬದ ವಾತಾವರಣ ಮೂಡಿತು. ಕಾರ್ಯಕರ್ತರು ಪರಸ್ಪರ ಸಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಗಿರೀಶ್ ಪಟೇಲ್, ಇತ್ತೀಚಿನ ದಿನಗಳಲ್ಲಿ ಮೋದಿ ಆಯ್ಕೆ ವಿಚಾರವಾಗಿ ಮಾಧ್ಯಮಗಳು ಬೇರೆ ರೀತಿಯ ಅಭಿಪ್ರಾಯಗಳನ್ನು ಹೊರಹಾಕುತ್ತಿದ್ದವು. ಆದರೆ, ಪಕ್ಷದ ಹಿರಿಯ ಮುಖಂಡರು ಅವಿರೋಧವಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿರುವುದು ಪಕ್ಷದಲ್ಲಿನ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.
ಗುಜರಾತ್ ರೀತಿಯ ಅಭಿವೃದ್ಧಿ ಕಾರ್ಯವನ್ನು ದೇಶದೆಲ್ಲೆಡೆ ಮಾಡಲು ಮೋದಿ ಶ್ರಮಿಸುತ್ತಾರೆ. ಈ ಮೂಲಕ ನರೇಂದ್ರ ಮೋದಿ ಅವರನ್ನು ಮುಂದಿನ ಎನ್ಡಿಎ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಪ್ರಥಮ ಹೆಜ್ಜೆ ಎಂದು ಅಭಿಪ್ರಾಯಪಟ್ಟರು. ಈ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ನೇತೃತ್ವವನ್ನು ಮೋದಿ ವಹಿಸಲಿದ್ದು, ಪ್ರಧಾನಿ ಹುದ್ದೆಗೆ ಏರಲಿದ್ದಾರೆ ಎಂದರು.
ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಶಂಕರ್, ರಾಜಶೇಖರ್, ಚನ್ನಬಸಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಡಿಎಸ್ ಅರುಣ್, ಮಾಜಿ ಸೂಡಾ ಅಧ್ಯಕ್ಷ ಜ್ಞಾನೇಶ್, ಹೊನ್ನಪ್ಪ ಮತ್ತಿತರರು ಇದ್ದರು.