ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಛತ್ರಿ ವಿತರಣೆ
ಭದ್ರಾವತಿ: ಮಳೆಗಾಲದಲ್ಲಿ ಮಕ್ಕಳು ಶಾಲೆಗೆ ಬರಲು ಅನುಕೂಲವಾಗುವಂತೆ ಅವರಿಗೆ ಛತ್ರಿ ವಿತರಿಸುತ್ತಿರುವುದು ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ಒಂದು ವಿನೂತನ ಚಿಂತನೆಯಾಗಿದೆ ಎಂದು ತಹಸೀಲ್ದಾರ್ ಸಿದ್ದಮಲ್ಲಪ್ಪ ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ನ್ಯೂಟೌನ್ನಲ್ಲಿರುವ ಸತ್ಯಸಾಯಿ ಸೇವಾಕ್ಷೇತ್ರದಲ್ಲಿ ಗ್ರಾಮಾಂತರ ಪ್ರದೇಶದ ವಿವಿಧ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಯ ಒಟ್ಟು 750 ಮಕ್ಕಳಿಗೆ ಏರ್ಪಡಿಸಿದ್ದ ಉಚಿತ ಛತ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉತ್ತಮ ಶಿಕ್ಷಣ: ಈ ಸಂಸ್ಥೆ ಉತ್ತಮ ದರ್ಜೆಯ ಶಿಕ್ಷಣ ನೀಡುವುದರೊಂದಿಗೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಇತರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಪ್ರತಿವರ್ಷ ಶೇರಿಂಗ್ ಅಂಡ್ ಕೇರಿಂಗ್ ಕಾರ್ಯಕ್ರಮದಡಿ ವಿವಿಧ ಶೈಕ್ಷಣಿಕ ವಸ್ತುಗಳನ್ನು ಕಾಣಿಕೆಯಾಗಿ ನೀಡುತ್ತಿರುವುದು ಶ್ಲಾಘನೀಯವೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವುದು ಮುಂತಾದ ಸವಲತ್ತುಗಳನ್ನು ನೀಡುತ್ತಿದೆ ಎಂದರು.
ತಹಸೀಲ್ದಾರ್ ನಫೀಜಾ ಬೇಗಂ ಉಪಸ್ಥಿತರಿದ್ದರು. ಸತ್ಯಸಾಯಿ ಸೇವಾ ಸಂಸ್ಥೆಗಳ ಜಂಟಿ ರಾಜ್ಯ ಸಂಯೋಜಕ ಹಾಗೂ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಪ್ರಭಾಕರ ಬೀರಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸತ್ಯಸಾಯಿ ಸೇವಾಸಂಸ್ಥೆಗಳ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಅನನ್ಯ ಮತ್ತು ಸಂಗಡಿಗರ ವೇದಘೋಷದ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಮುಖ್ಯೋಪಾಧ್ಯಾಯ ಜಿ.ಪಿ. ಪರಮೇಶ್ವರಪ್ಪ ಸ್ವಾಗತಿಸಿದರು. ಗೀತಾ ಕಾರ್ಯಕ್ರಮ ನಿರೂಪಿಸಿದರು