ಹೈಕಮಾಂಡ್ ನಿರ್ಧಾರವೇ ಅಂತಿಮ: ಸುನೀಲ್
ಸಾಗರ: ಯಡಿಯೂರಪ್ಪನವರನ್ನು ಬಿಜೆಪಿ ಮತ್ತೆ ಸೇರಿಸಿಕೊಳ್ಳುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಕಾರ್ಕಳ ಬಿಜೆಪಿ ಶಾಸಕ ಸುನೀಲ್ಕುಮಾರ್ ಹೇಳಿದರು.
ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ ಮನೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಮರಳಿ ಬಿಜೆಪಿಗೆ ಬರಬೇಕು ಎನ್ನುವ ಅಭಿಪ್ರಾಯವನ್ನು ಪಕ್ಷದ ಅನೇಕ ಹಿರಿಯ ಮುಖಂಡರು ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಚರ್ಚೆ ನಡೆಸಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎಂದರು.
ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವುದು ಹಾಗೂ ನಾಯಕತ್ವದ ಕೊರತೆಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಭವಿಷ್ಯ ನುಡಿದ ಅವರು, ಮೋದಿ ಫ್ಯಾಕ್ಟರ್ ಬಿಜೆಪಿಗೆ ವರದಾನವಾಗಲಿದೆ. ಮೋದಿ ಒಬ್ಬ ಸಮರ್ಥ ನಾಯಕ ಎನ್ನುವುದು ಜನರಿಗೆ ತಿಳಿದಿದ್ದು, ಕೇಂದ್ರದಲ್ಲಿ ಎನ್ಡಿಎ ನೇತೃತ್ವದ ಸರ್ಕಾರ ಆಡಳಿತಕ್ಕೆ ಬರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ 93 ಸಾವಿರ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳಿದ್ದಾರೆ. ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಹೆಸರಿನಲ್ಲಿ ರಾಜ್ಯ ಸರ್ಕಾರ ಸದಸ್ಯರನ್ನು ಅನರ್ಹಗೊಳಿಸುವ ನಿರ್ಧಾರ ಕೈಗೊಂಡಿರುವುದು ಜನರಿಂದ ಆಯ್ಕೆಯಾಗಿ ಬಂದಿರುವ ಸದಸ್ಯರ ಹಕ್ಕುಚ್ಯುತಿಗೆ ಕಾರಣವಾಗುತ್ತದೆ. ಇಂತಹ ಅನೇಕ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನಪರವಾಗಿಲ್ಲ ಎನ್ನುವುದನ್ನು ಮತ್ತೆಮತ್ತೆ ಸಾಬೀತುಪಡಿಸುತ್ತಿದೆ ಎಂದರು.