ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಆಯನೂರು ಗ್ರಾಮದಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಇಲ್ಲಿನ
ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದ್ದು, ಜನತೆ ನೀರಿಗಾಗಿ ತತ್ತರಿಸುತ್ತಿದ್ದಾರೆ. ಎರಡು-ಮೂರು ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಅದು ಕೂಡ ಸರಿಯಾಗಿ ಹರಿಸದೇ ಒಂದೆರಡು ಕೊಡ ತುಂಬುವುದರೊಳಗೆ ನಿಂತು ಹೋಗುತ್ತದೆ. ಅಲ್ಲದೇ, ಕೆಲ ಪ್ರದೇಶಗಳಲ್ಲಿ ನೀರಿನ ಬವಣೆ ಹೇಳತೀರದಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಕ್ರಮ ಕೈಗೊಂಡಿಲ್ಲ: ಜಿಲ್ಲಾಡಳಿತ ಹಾಗೂ ಜಿಪಂ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಇಲ್ಲಿನ ಕೆರೆ, ಕಟ್ಟೆಗಳಲ್ಲಿ ನೀರಿಲ್ಲದೆ ಬರಿದಾಗುತ್ತಿವೆ. ಜನರಿಗಷ್ಟೆ ಅಲ್ಲದೆ ಜಾನುವಾರುಗಳಿಗೂ ಕೂಡ ಕುಡಿಯಲು ನೀರಿಲ್ಲ. ಈ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಪ್ರತಿಭಟನೆ, ಮನವಿ ಮಾಡಿದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಆಪಾದಿಸಿದರು.
ಈ ಕೂಡಲೇ ಜಿಲ್ಲಾಡಳಿತ, ಜಿಪಂ ಹಾಗೂ ಗ್ರಾಪಂ ಅಧಿಕಾರಿಗಳು ಸಮಸ್ಯೆ ಕುರಿತಂತೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಶಂಕರಪ್ಪ, ಬಸವರಾಜು, ಇಮ್ದಾದ್, ಸುಶೀಲಮ್ಮ, ಸುಜಾತ, ರಂಗನಾಥ್ ಮತ್ತಿತರರು ಇದ್ದರು.