ಭರ್ಜರಿ ಪ್ರಚಾರಕ್ಕೆ ಬಿಜೆಪಿ ಅಣಿ
ಕ.ಪ್ರ ವಾರ್ತೆ, ಶಿವಮೊಗ್ಗ, ಮಾ.21
ಚುನಾವಣೆ ಘೋಷಣೆಯಾಗುತ್ತಿದ್ದಂತೆ ಭರ್ಜರಿ ಪ್ರಚಾರಕ್ಕೆ ಬಿಜೆಪಿ ಅಣಿಯಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ವಿಜಯ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅದರಂತೆ ಮಾ.24ರಂದು ಪಕ್ಷದ ಪ್ರತಿಷ್ಠೆಯ ಕಣವಾದ ಶಿವಮೊಗ್ಗಕ್ಕೆ ಪಕ್ಷದ ಘಟಾನುಘಟಿಗಳು ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 4 ಗಂಟೆಗೆ ನಗರದ ಎನ್ಇಎಸ್ ಮೈದಾನದಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಸಂಸದ ಅನಂತಕುಮಾರ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಪಾಲ್ಗೊಳ್ಳಲಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ ಅವರು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಅಂದು 15 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿ ರಚಿಸಲಾಗಿದೆ. ಈ ಸಮಿತಿ ಮೂಲಕವೇ ಸಮಾವೇಶ ಆಯೋಜನೆಯಾಗಲಿದೆ ಎಂದರು.
ಸಿದ್ಧರಿದ್ದೇವೆ: ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ. ಪ್ರತಿ ಕ್ಷೇತ್ರದಲ್ಲಿಯೂ ಚುನಾವಣಾ ನಿರ್ವಹಣಾ ಸಮಿತಿ ರಚಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆದಿದೆ. ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಿದ್ದು, ಶೀಘ್ರ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು. ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂದ ಸಿದ್ದರಾಮಣ್ಣ, ಸಾಗರ ಕ್ಷೇತ್ರದ ಶಾಸಕ ಬಿಜೆಪಿ ಬಿಡುವುದಾಗಿ ಹೇಳಿರುವುದರಿಂದ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಅಂತೆಯೇ ಸೊರಬದಲ್ಲಿಯೂ ಎಂದರು.
ಯುವಮೋರ್ಚಾ ಜಿಲ್ಲಾಧ್ಯಕ್ಷ ಅರುಣ್, ವೀರಪ್ಪಮೊಯ್ಲಿ ಅವರು ನಡೆಸಿರುವ ಭ್ರಷ್ಟಾಚಾರ ಖಂಡಿಸಿ ಮಾ.22ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ್, ದತ್ತಾತ್ರಿ, ಚೆನ್ನಬಸಪ್ಪ, ಸುಭಾಷ್, ಶ್ರೀಧರ್ ಇದ್ದರು.