ಶ್ರೀರಾಮುಲು ಬಂಧನಕ್ಕೆ ಖಂಡನೆ
ಕ.ಪ್ರ ವಾರ್ತೆಚಿಕ್ಕಮಗಳೂರುಮಾ. 23
ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರನ್ನು ಏಕಾಏಕಿ ಬಂಧಿಸಿರುವುದನ್ನು ಪಕ್ಷದ ತಾಲೂಕು ಅಧ್ಯಕ್ಷ ಅಣ್ಣವೇಲು ಖಂಡಿಸಿದ್ದಾರೆ.
ಬಳ್ಳಾರಿಯಲ್ಲಿ ಅಲ್ಲಿನ ಜಿಲ್ಲಾಧಿಕಾರಿ ರಸ್ತೆಬದಿಯಲ್ಲಿ ವ್ಯಾಪಾರ ಮಾಡುತ್ತಿರುವವರನ್ನು ಯಾವುದೇ ಮುನ್ಸೂಚನೆ ನೀಡದೆ ಒಕ್ಕಲೆಬ್ಬಿಸಿ ಬೀದಿಗೆ ತಳ್ಳಿದ್ದರು. ಬಡವರ ಪರ ಶ್ರೀರಾಮುಲು, ಸಂಸದೆ ಶಾಂತಾ ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಏಕಾಏಕಿ ಗೂಂಡಾವರ್ತನೆಯೊಂದಿಗೆ ಬಂಧಿಸಿ ಕಾಂಗ್ರೆಸ್ ಪಕ್ಷದ ವಕ್ತಾರರಂತೆ ನಡೆದುಕೊಂಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರ್ಗಾವಣೆ ಮಾಡದಿದ್ದರೆ ರಾಜ್ಯಾದ್ಯಂತ ಪಕ್ಷದ ವತಿಯಿಂದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಇತಿಮಿತಿಯಲ್ಲಿ ಕೆಲಸ ಮಾಡಬೇಕೆ ಹೊರತು ಹೋರಾಟ ಮಾಡುವವರ ವಿರುದ್ಧ ಗೂಂಡಾ ವರ್ತನೆ ಮಾಡುವುದು ಅತ್ಯಂತ ಖಂಡನೀಯ ವಿಷಯ. ಅಧಿಕಾರಿಗಳು ಯಾವುದೇ ಪಕ್ಷದ ಏಜೆಂಟರಂತೆ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.