ಮತ ಎಣಿಕೆಗೆ ಜಿಲ್ಲಾಡಳಿತ ಸಿದ್ಧತೆ
ಶಿವಮೊಗ್ಗ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವನ್ನು ಶಿವಮೊಗ್ಗ ನಗರದ ಎನ್‌ಇಎಸ್ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಹಾಗೂ ವಿಜ್ಞಾನ ಪದವಿ ಕಾಲೇಜು ಕೊಠಡಿಗಳಲ್ಲಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಭಾನುವಾರ ರಾತ್ರಿಯಿಂದಲೇ ವಿವಿಧ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಬಸ್, ಲಾರಿ, ಜೀಪ್ ಮತ್ತಿತರ ವಾಹನಗಳಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ನಗರದ ಎನ್‌ಇಎಸ್ ಕಾಲೇಜುಗಳಿಗೆ ತರಲಾಗಿತ್ತು. ಈ ಪ್ರಕ್ರಿಯೆ ಬೆಳಿಗ್ಗೆಯವರೆಗೂ ಮುಂದುವರಿದಿತ್ತು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳನ್ನು ದಾಸ್ತಾನು ಮಾಡಲಾಗಿದೆ. ವಿವಿಧ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕೊಠಡಿಯ ಬಾಗಿಲು ಮುಚ್ಚಿ, ಬೀಗ ಹಾಕಿ ಸೀಲ್ ಮಾಡಿದರು. ಈ ಸಂದರ್ಭದಲ್ಲಿ ಆಯಾ ಕ್ಷೇತ್ರದ ಚುನಾವಣಾ ವೀಕ್ಷಕರು, ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಎನ್‌ಇಎಸ್ ಪದವಿ ಪೂರ್ವ ಕಾಲೇಜು ಹಾಗೂ ವಿಜ್ಞಾನ ಪದವಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ, ಮತಯಂತ್ರಗಳ ಭದ್ರತೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಮತಯಂತ್ರ ದಾಸ್ತಾನು ಮಾಡಿರುವ ಕಾಲೇಜುಗಳ ಸುತ್ತಮುತ್ತಲು ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ವ್ಯಾಪಕ ಭದ್ರತಾ ವ್ಯವಸ್ಥೆ ಮಾಡಲಾಗಿದೆ.