ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಂತಿಕೆ: ಪೇಸ್ ಕಾಲೇಜು ಎದುರು ಪ್ರತಿಭಟನೆ

Lingaraj Badiger
Updated On : 25 May 2013, 11:04 am

ಶಿವಮೊಗ್ಗ: ಡಿವಿಎಸ್ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒಡೆತನದ ಪೇಸ್ ಪಿಯು ಕಾಲೇಜುಗಳಲ್ಲಿ ಕಾನೂನು ಬಾಹಿರವಾಗಿ ವಿದ್ಯಾರ್ಥಿಗಳಿಂದ ಡೊನೇಷನ್ ಪಡೆಯುತ್ತಿರುವುದನ್ನು ವಿರೋಧಿಸಿ ಶುಕ್ರವಾರ ಎನ್‌ಎಸ್‌ಯುಐ ಕಾರ್ಯಕರ್ತರು ಪೇಸ್ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.
   ನಗರದ ಹಲವು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಾದ ಪೇಸ್ ಮತ್ತು ಡಿವಿಎಸ್ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಮನಬಂದಂತೆ ಶುಲ್ಕ ವಸೂಲು ಮಾಡುತ್ತಿದ್ದಾರೆ.
  ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗಲಿದ್ದು, ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಶಿಕ್ಷಣ ಪಡೆಯಲು ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
40-50 ಡೊನೇಷನ್: ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಪ್ರಥಮ ಪಿಯುಸಿಗೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ಅನುದಾನ ಮತ್ತು ಅನುದಾನ ರಹಿತ ಕಾಲೇಜುಗಳಲ್ಲಿ ಕೇವಲ 1.500 ಮತ್ತು 2.500 ಸಾವಿರ ಮಾತ್ರ ಪ್ರವೇಶ ಶುಲ್ಕ ಪಡೆಯಬೇಕು ಎಂಬ ನಿಯಮವಿದೆ. ಆದರೆ, ಈ ಕಾಲೇಜುಗಳಲ್ಲಿ ಇಲಾಖೆಯ ನಿರ್ದೇಶನಗಳನ್ನು ಧಿಕ್ಕರಿಸಿ, ಪೇಸ್ ಕಾಲೇಜು 40-50 ಸಾವಿರ ಹಾಗೂ ಡಿವಿಎಸ್ ಕಾಲೇಜು 27 ಸಾವಿರ ಶುಲ್ಕ ವಸೂಲಿ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
   ಶಿಕ್ಷಣ ಇಲಾಖೆಯ ನಿಯಮಗಳನ್ನು ಧಿಕ್ಕರಿಸಿರುವ ಕಾಲೇಜುಗಳು ಎಸ್‌ಎಸ್‌ಎಲ್‌ಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಿದ್ದು, ಶಿಕ್ಷಣ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿವೆ. ಇಂತಹ ಮಾಹಿತಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಬಳಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ ಎಂದು ಪ್ರತಿಭಟನಾಕಾರರು ತಿಳಿಸಿದರು.
ಹೋರಾಟ ತೀವ್ರಗೊಳ್ಳಲಿದೆ: ಶಿಕ್ಷಣ ಇಲಾಖೆ ಉಪನಿರ್ದೇಶಕರು ಕೂಡಲೇ ಇಂತಹ ಕಾಲೇಜುಗಳ ಮಾನ್ಯತೆಯನ್ನು ರದ್ದು ಪಡಿಸಬೇಕು, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಶುಲ್ಕ ಪಡೆಯುತ್ತಿರುವ ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಸಂಘಟನೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
  ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಕಾರ್ಯದರ್ಶಿ ಸಿ.ಜೆ. ಮಧುಸೂದನ್, ಜಿಲ್ಲಾಧ್ಯಕ್ಷ ಕೆ. ಚೇತನ್, ಉಪಾಧ್ಯಕ್ಷ ವಿಕಾಸ ಶಿವಶಂಕರ್, ಪುನಿತ್, ಗೌತಮ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement