ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಿಸಿಯೂಟಕ್ಕೆ ಕಳಪೆ ಅಕ್ಕಿ: ಕ್ರಮಕ್ಕೆ 15 ದಿನ ಗಡವು

Lingaraj Badiger
Updated On : 31 May 2013, 11:12 am

ಕಪ್ರ ವಾರ್ತೆ, ಶಿವಮೊಗ್ಗ, ಮೇ 30
ಅಕ್ಷರ ದಾಸೋಹ ಬಿಸಿಯೂಟ ಯೋಜನೆಯಡಿ ಶಾಲೆಗಳಿಗೆ ಕಳಪೆ ಗುಣಮಟ್ಟದ ಅಕ್ಕಿ ಸರಬರಾಜು ಮಾಡಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಎಂ. ಗುರುಮೂರ್ತಿ ಆರೋಪಿಸಿದ್ದಾರೆ.
ಗುತ್ತಿಗೆದಾರರು, ಸಾಗಾಣೆದಾರರು, ಅಧಿಕಾರಿಗಳು ಶಾಮೀಲಾಗಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬುದು ಅವರ ಆಪಾದನೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು, ಅಕ್ಷರ ದಾಸೋಹ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ವೇಳೆ ಬಿಸಿಯೂಟ ನೀಡಲಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನದಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿರುವ ದೂರುಗಳು ಕೇಳಿಬಂದಿವೆ ಎಂದು ತಿಳಿಸಿದರು.
15 ದಿನ ಗಡವು: 15 ದಿನದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದಲಿತ ಸಂಘರ್ಷ ಸಮಿತಿಯು ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.
ಬಿಸಿಯೂಟ ತಯಾರಿಸಲು ಅಗತ್ಯವಾದ ಆಹಾರ ಧಾನ್ಯಗಳನ್ನು ಕೆಎಫ್‌ಸಿಎಸ್‌ಸಿ ಸಗಟು ಮಳಿಗೆಯಿಂದ ಶಾಲೆಗಳಿಗೆ ಸರಬರಾಜು ಮಾಡಲಾಗುತ್ತಿದೆ. ಹೊರ ರಾಜ್ಯಗಳಿಂದ ಉತ್ತಮ ಅಕ್ಕಿ ಸರಬರಾಜಾಗುತ್ತಿದ್ದರೂ ಅಧಿಕಾರಿಗಳು, ಗುತ್ತಿಗೆದಾರರು ಒಳ ಒಪ್ಪಂದ ಮಾಡಿಕೊಂಡು ಶಾಲೆಗಳಿಗೆ ಕಳಪೆ ಗುಣಮಟ್ಟದ ಅಕ್ಕಿ ಸರಬರಾಜು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕ್ರಮ ಕೈಗೊಂಡಿಲ್ಲ: ನಿರ್ದಿಷ್ಟ ಸಮಯದಲ್ಲಿ, ಟೆಂಡರ್ ವೇಳೆ ನೀಡಿದ ಲಾರಿಗಳಲ್ಲಿ ಮಾತ್ರ ಶಾಲೆಗಳಿಗೆ ಆಹಾರ ಧಾನ್ಯ ಸರಬರಾಜು ಮಾಡಬೇಕೆಂಬ ನಿಯಮವಿದೆ. ಆದರೆ ನಿಯಮದ ಸಮರ್ಪಕ ಅನುಷ್ಠಾನವಾಗುತ್ತಿಲ್ಲ. ಮನಸೋಇಚ್ಚೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಶಾಲೆಗಳಿಗೆ ನೀಡಲಾದ ಅಕ್ಕಿಯಲ್ಲಿಯೂ ತೂಕ ವ್ಯತ್ಯಾಸ ಕಂಡುಬರುತ್ತಿದೆ. ಈ ಕುರಿತಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಈಗಾಗಲೇ ಸಂಘಟನೆ ವತಿಯಿಂದ ದಾಖಲೆ ಸಮೇತ ಮನವಿ ಅರ್ಪಿಸಲಾಗಿದೆ. ಆದರೆ ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಕ್ಷಣವೇ ಯೋಜನೆಯಲ್ಲಾಗುತ್ತಿರುವ ಅವ್ಯವಹಾರದ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಕ್ಷರ ದಾಸೋಹ ಕಾರ್ಯಕ್ರಮದ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು, ಶಿಕ್ಷಣ ಸಂಯೋಜಕರು, ಸಮೂಹ ಸಂಪನ್ಮೂಲ ವ್ಯಕ್ತಿ, ಕೆಎಫ್‌ಸಿಎಸ್‌ಸಿ ವ್ಯವಸ್ಥಾಪಕರು ಮತ್ತು ಸಹಾಯಕ ವ್ಯವಸ್ಥಾಪಕರನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement