ಇಂದು ರೈತ ಸಂಘ ಪ್ರತಿಭಟನೆ
ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನ.19ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನ ಮೆರವಣಿಗೆ ನಡೆಸಲಿದೆ.
ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಕೃಷಿ ಉತ್ಪನ್ನಗಳಿಗೆ ಕಡಿಮೆ ಅಮದು ಸುಂಕ ವಿಧಿಸಿರುವುದರಿಂದ ಸುಗ್ಗಿ ಬರುವುದಕ್ಕಿಂತ ಮೊದಲೇ ರೈತರು ಬೆಳೆದ ಬೆಳೆಗಳು ಮೌಲ್ಯ ಕುಸಿದಿವೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ ರೈತರ ಬೆಳೆಗೆ ಖರ್ಚು ಮಾಡಿದ ಹಣಕ್ಕಿಂತ ಕಡಿಮೆ ಇದೆ ಎಂದು ಸಂಘ ಆರೋಪಿಸಿದೆ.
ರೈತರ ಸಂಪೂರ್ಣ ಎಲ್ಲಾ ಸಾಲಗಳನ್ನು ರದ್ದು ಮಾಡಬೇಕು. ಕೂಡಲೇ ಸಾಲ ವಸೂಲಾತಿ ನಿಲ್ಲಿಸಬೇಕು. ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ತಕ್ಷಣ ಪರಿಹಾರ ಕೂಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳಲಾಗಿದೆ ಎಂದು ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜಪ್ಪ ತಿಳಿಸಿದ್ದಾರೆ.