ಮಕ್ಕಳನ್ನು ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹಿಸಿ: ಹೇಮಾ ಪಾವನಿ
ಶಿವಮೊಗ್ಗ: ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚು ಅಂಕಗಳಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆಯೇ ಹೊರತು ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಹೇಮಾಪಾವನಿ ವಿಷಾದಿಸಿದರು.
ಜಿಲ್ಲಾ ಪಂಚಾಯಿತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಶ್ರೀ ಆದಿಚುಂಚನಗಿರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಆಶ್ರಯದಲ್ಲಿ ಗುರುವಾರ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಆಥ್ಲೆಟಿಕ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಪಠ್ಯಕ್ಕೆ ಮಕ್ಕಳನ್ನು ಸಿಮೀತವಾಗಿರುವಂತೆ ಬೆಳೆಸಬಾರದು. ಇದರಿಂದ ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗುವುದಿಲ್ಲ. ಬದಲಿಗೆ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕುಎಂದರು.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯಿತ್ರಿ ಷಣ್ಮುಖಪ್ಪ, ಡಿಡಿಪಿಐ ಬಿ.ಸಿ. ಬಸವರಾಜಪ್ಪ, ದೈಹಿಕ ಶಿಕ್ಷಣ ಅಭಿಯೋಜಕ ಎಸ್.ಎಂ. ರಮೇಶ್, ಶಾಲೆಯ ಪ್ರಾಂಶುಪಾಲ ಗುರುರಾಜ್ ಇದ್ದರು.