'ನನ್ನ ರಾಜಕೀಯ ಭವಿಷ್ಯ ತಂದೆಗೆ ಬಿಟ್ಟಿದ್ದು'
ಶಿವಮೊಗ್ಗ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕುರಿತು ನನ್ನ ರಾಜಕೀಯ ಗುರು ಹಾಗೂ ತಂದೆ ಬಿ.ಎಸ್. ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸಲು ಹಾಗೂ ಗೆಲ್ಲಲು ತಂದೆ ಯಡಿಯೂರಪ್ಪ ಕಾರಣ, ಅವರೇ ತಮ್ಮ ರಾಜಕೀಯ ಗುರುವಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ತಾವು ರಾಜಕೀಯ ಜೀವನವನ್ನು ಮುನ್ನಡೆಸುತ್ತಿದ್ದೇನೆ.
ಸಂಸದನಾಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಜನತೆಗೆ ನೀಡಿದ್ದ ಭರವಸೆ ಈಡೇರಿಸಿದ್ದೇನೆ ಎಂದು ತಿಳಿಸಿದರು.
ಟೀಕಾ ಪ್ರಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಾರಿಗೊಳಿಸುತ್ತಿರುವ ಯೋಜನೆಗಳು ಪಕ್ಷಪಾತ, ಒಂದು ವರ್ಗದ ಸಮಾಜದ ಓಲೈಕೆಯಾಗಿದೆ. ಇವರೇನು ಒಂದು ವರ್ಗಕ್ಕೆ ಸೇರಿದ ಮುಖ್ಯಮಂತ್ರಿಯೋ ಅಥವಾ ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಎಂಬುವುದನ್ನು ಮೊದಲು ಸ್ಪಷ್ಟಪಡಿಸಬೇಕಿದೆ ಎಂದು ಪ್ರಶ್ನಿಸಿದರು.
ಒಂದು ವರ್ಗದ ಓಲೈಕೆಗಾಗಿ ಸಿಎಂ ಜಾರಿಗೊಳಿಸುತ್ತಿರುವ ಯೋಜನೆಗಳಿಂದ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಕ್ಕಳ ಮನಸ್ಸಿನಲ್ಲಿಯೂ ಜಾತಿಯ ವಿಷ ಬೀಜ ಬಿತ್ತುವ ಕೆಲಸ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಹಾಗೂ ಕರಾವಳಿ ಭಾಗದಲ್ಲಿ ನಕ್ಸಲೀಯರ ಚಟುವಟಿಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಭಯೋತ್ಪಾದಕ ಯಾಸಿನ್ ಭಟ್ಕಳ್ ಯಾರೆಂಬುವುದೇ ತಮಗೆ ಗೊತ್ತಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ರಾಜ್ಯ ಸರ್ಕಾರದ ಈ ಕಾರ್ಯವೈಖರಿಯಿಂದ ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.