ಮಹಿಳಾ ಐಟಿಐ ಕಾಲೇಜು ಸ್ಥಳಾಂತರಕ್ಕೆ ವಿರೋಧ
ಕ.ಪ್ರ.ವಾರ್ತೆ, ಶಿವಮೊಗ್ಗ, ನ. 27
ನಗರದ ಕೋಟೆ ರಸ್ತೆಯ ಮ್ಯಾಮಾಕೋಸ್ ಕಟ್ಟಡದಲ್ಲಿರುವ ಸರ್ಕಾರಿ ಮಹಿಳಾ ಐಟಿಐ ಕಾಲೇಜನ್ನು ತಾಲೂಕಿನ ಗಾಜನೂರಿಗೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೋಟೆ ರಸ್ತೆಯಲ್ಲಿರುವ ಐಟಿಐ ಕಾಲೇಜಿನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘಟನೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಗ್ರಾಮೀಣ ವಿದ್ಯಾರ್ಥಿನಯರು: ಸರ್ಕಾರಿ ಐಟಿಐ ಕಾಲೇಜಿನಲ್ಲಿ ಸುಮಾರು 250 ವಿದ್ಯಾರ್ಥಿನಿಯರು ಓದುತ್ತಿದ್ದು, ಬಹುತೇಕ ವಿದ್ಯಾರ್ಥಿನಿಯರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಆದರೆ, ಕಾಲೇಜನ್ನು ಗಾಜನೂರಿನ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿನಿಯರಿಗೆ ಸಾಕಷ್ಟು ತೊಂದರೆಯಾಗುತ್ತದೆ ಎಂದು ಪ್ರತಿಭಟನಕಾರರು ದೂರಿದರು.
ವಿದ್ಯಾರ್ಥಿನಿಯರಿಗೆ ಸಾಕಷ್ಟು ಆರ್ಥಿಕ ಹೊರೆ ಬೀಳಲಿದೆ. ಅಲ್ಲದೇ ಬೇರೆ ಗ್ರಾಮಗಳಿಂದ ಆಗಮಿಸುವ ವಿದ್ಯಾರ್ಥಿನಿಯರು ಕಾಲೇಜಿಗೆ ತೆರಳಲು ಹರಸಾಹಸ ಪಡುವಂತಾಗಿದೆ ಎಂದರು.
100 ಕಾಲೇಜು: ಪ್ರಸ್ತುತ ರಾಜ್ಯದಲ್ಲಿ 100 ಐಟಿಐ ಕಾಲೇಜು ತೆರೆಯಲು ಸರ್ಕಾರ ನಿರ್ಧರಿಸಿದ್ದು, ಗಾಜನೂರು ಬಳಿ ನಿರ್ಮಿಸಿರುವ ನೂತನ ಕಟ್ಟಡದಲ್ಲಿ ಪುರುಷ ಐಟಿಐ ಕೇಂದ್ರ ಆರಂಭಿಸಿ, ನಗರದಲ್ಲಿರುವ ಹಳೆ ಕಟ್ಟಡದಲ್ಲಿರುವ ವಿದ್ಯಾರ್ಥಿನಿಯರ ಐಟಿಐ ಕಾಲೇಜನ್ನು ಮುಂದುವರಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಕಾರ್ಯದರ್ಶಿ ಸಿ.ಜಿ. ಮಧುಸೂದನ್, ಜಿಲ್ಲಾಧ್ಯಕ್ಷ ಕೆ. ಚೇತನ್, ರಾಜ್ಯ ಸಂಚಾಲಕ ಶ್ರೀಜಿತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್, ನಗರ ಪ್ರಧಾನ ಕಾರ್ಯದರ್ಶಿ ಬಾಲಾಜಿ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಮೊದಲಾದವರು ಇದ್ದರು.