ಸರ್ಕಾರಿ ನೌಕರರಿಗೆ ವಿವಿಧ ಸ್ಪರ್ಧೆ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 6 ಮತ್ತು 7ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಪ್ರಸಕ್ತ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಪುರುಷರ ವಿಭಾಗದಲ್ಲಿ 45 ವರ್ಷ ಒಳಪಟ್ಟ ಮತ್ತು 45ವರ್ಷ ಮೇಲ್ಪಟ್ಟ ಹಾಗೂ ಮಹಿಳೆಯರ ವಿಭಾಗದಲ್ಲಿ 40ವರ್ಷ ಒಳಪಟ್ಟ ಮತ್ತು 40ವರ್ಷ ಮೇಲ್ಪಟ್ಟ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ಇರುವುದಿಲ್ಲ ಒಟ್ಟಿಗೆ ಭಾಗವಹಿಸತಕ್ಕದ್ದು.
ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ರಾಜ್ಯ ಸರ್ಕಾರಿ ನೌಕರರು ತಾವು ಕೆಲಸ ನಿರ್ವಹಿಸುತ್ತಿರುವ ಕಚೇರಿಯ ಮುಖ್ಯಸ್ಥರಿಂದ ತಮ್ಮ ಹೆಸರು, ಹುದ್ದೆ, ಇಲಾಖೆ, ಸೇವೆಗೆ ಸೇರಿದ ದಿನಾಂಕದ ಬಗ್ಗೆ ಗುರುತಿನ ಚೀಟಿಯನ್ನು ಭಾವಚಿತ್ರದ ಮೇಲೆ ಮೇಲಾಧಿಕಾರಿಗಳಿಂದ ದೃಢೀಕರಿಸಿ ಭಾಗವಹಿಸುವ ಸ್ಪರ್ಧೆಯನ್ನು ನಮೂದಿಸಿ ನ.30ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿಗೆ ಪ್ರವೇಶ ಪತ್ರ ಕಳುಹಿಸಬೇಕು. ಡಿಸೆಂಬರ್ 6ರಂದು ಬೆಳಿಗ್ಗೆ 8 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿ, ಹೆಸರು ನೋಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಉದ್ಘಾಟನೆ: ಡಿಸೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಉದ್ಘಾಟಿಸುವರು. ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಕೌಶಲೇಂದ್ರ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸುವರು.