ಆಮಿಷಕ್ಕೆ ಒಳಗಾಗದೆ ಮತ ಹಾಕಿ
ಶಿವಮೊಗ್ಗ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೇ ಮುಖ್ಯವಾಗಿದ್ದು, ಯುವ ಜನತೆ ತಪ್ಪದೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿಪುಲ್ ಬನ್ಸಲ್ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದಲ್ಲಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಒಟ್ಟು ಮತದಾರರಲ್ಲಿ ಯುವ ಮತದಾರರು ಹಾಗೂ ಹೊಸ ನೋಂದಾಯಿತ ಮತದಾರರ ಸಂಖ್ಯೆ ಶೇ. 8ಕ್ಕಿಂತಲೂ ಹೆಚ್ಚಿನವರಿದ್ದಾರೆ. ಅವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಏ. 17ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಜಾಗೃತರಾಗಿ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭಿತಿಯಿಂದ ಮತ ಚಲಾಯಿಸಬೇಕು. ಆಗ ಮಾತ್ರ ಸಂವಿಧಾನದ ಆಶಯ ಎತ್ತಿ ಹಿಡಿದಂತಾಗುತ್ತದೆ ಎಂದರು.
ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ತಮ್ಮ ಹಕ್ಕಿನ ಮಹತ್ವ ತಿಳಿಸಿಕೊಡುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.