ಜನ ಶಿಕ್ಷಣ ಸಂಸ್ಥೆಯಿಂದ ಅರುಣಾದೇವಿ ಉಚ್ಚಾಟನೆಗೆ ಆಗ್ರಹ
ಶಿವಮೊಗ್ಗ: ಕೇಂದ್ರ ಸರ್ಕಾರದ ಅನುದಾನ ಪಡೆಯುತ್ತಿರುವ ಜನ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಬಿ.ವೈ. ಅರುಣಾದೇವಿಯವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪನವರ ಪರ ಬಹಿರಂಗ ಪ್ರಚಾರದಲ್ಲಿ ತೊಡಗಿದ್ದು, ಅವರನ್ನು ಜನಶಿಕ್ಷಣ ಸಂಸ್ಥೆಯಿಂದ ಉಚ್ಛಾಟಿಸುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ.
ಬುಧವಾರ ಜಿಲ್ಲಾ ಚುನಾವಣಾಧಿಕಾರಿಯವರಿಗೆ ಮನವಿ ಸಲ್ಲಿಸಿದ ತೀ.ನ.ಶ್ರೀನಿವಾಸ್, ಎನ್ .ರಮೇಶ್ ನೇತೃತ್ವದ ನಿಯೋಗವು ದೂರು ಸಲ್ಲಿಸಿ, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನ.ಶ್ರೀನಿವಾಸ್, ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯಿಂದ ಪ್ರತಿ ವರ್ಷ 25 ಲಕ್ಷಕ್ಕೂ ಅಧಿಕ ಮೊತ್ತವನ್ನು ಜನ ಶಿಕ್ಷಣ ಸಂಸ್ಥೆ ಪಡೆಯುತ್ತಿದೆ. ಸ್ವಯಂ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಅನುದಾನ ನೀಡುತ್ತಿದೆ. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಅರುಣಾದೇವಿಯವರು ಸರ್ಕಾರದ ವೇತನ ಕೂಡ ಪಡೆಯುತ್ತಿದ್ದಾರೆ. ಸರ್ಕಾರದ ಅನುದಾನ ಪಡೆಯುತ್ತಿರುವ ಇವರು ಬಿಜೆಪಿ ಅಭ್ಯರ್ಥಿಪರ ಮತ ಯಾಚಿಸುತ್ತಿದ್ದಾರೆ. ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಮತ ಯಾಚಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.