ಬಸ್ ಸೌಲಭ್ಯಕ್ಕಾಗಿ ಪ್ರತಿಭಟನೆ
ಕ.ಪ್ರ.ವಾರ್ತೆ , ಶಿವಮೊಗ್ಗ , ಫೆ.1
ಹೊಳೆಹೊನ್ನೂರು- ಕೈಮರ ಭಾಗದಿಂದ ಚನ್ನಗಿರಿ ಹಾಗೂ ಶಿವಮೊಗ್ಗದ ಕಾಲೇಜುಗಳಿಗೆ ಓಡಾಡುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ತೊಂದರೆಯಾಗುತ್ತಿದೆ. ಈ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಎನ್ಎಸ್ಯುಐ ಕಾರ್ಯಕರ್ತರು ಸರ್ಕಾರಿ ಬಸ್ ನಿಲ್ದಾಣದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳಿಗೆ ದಿನ ನಿತ್ಯ ಸಾರಿಗೆ ವ್ಯವಸ್ಥೆಯಲ್ಲಿ ವಿಪರೀತ ತೊಂದರೆ ಆಗುತ್ತಿದೆ. ಅದರಲ್ಲೂ ಚನ್ನಗಿರಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಕೆಎಸ್ಆರ್ಟಿಸಿ ಬಸ್ಸುಗಳು ಸರಿಯಾದ ಸಮಯಕ್ಕೆ ಬಾರದೆ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕೂಡಲೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸರಿಯಾದ ಸಮಯಕ್ಕೆ ಬಸ್ಸುಗಳನ್ನು ನಿಗದಿಪಡಿಸಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಗಳಿಗೆ ತೊಂದರೆ: ಶಿವಮೊಗ್ಗದಿಂದ ಚನ್ನಗಿರಿಗೆ ಹೋಗುವ ಬಸ್ಸುಗಳ ಸಂಖ್ಯೆ ಕಡಿಮೆಯಾಗಿದೆ. ಇನ್ನೂ ಹೆಚ್ಚಿನ ಬಸ್ಸುಗಳ ಅವಶ್ಯಕತೆ ಇದೆ. ಪಾಸ್ ಹೊಂದಿರುವಂತಹ ವಿದ್ಯಾರ್ಥಿಗಳೊಂದಿಗೆ ಸರ್ಕಾರಿ ಬಸ್ಸಿನ ಚಾಲಕ ಮತ್ತು ನಿರ್ವಾಹಕ ತೀವ್ರ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಬೆಳಗಿನ ಸಮಯದಲ್ಲಿ ಕಾಲೇಜಿಗೆ ಹೋಗುವ ಹಾಗೂ ಸಂಜೆ ಕಾಲೇಜಿನಿಂದ ಮನೆಗೆ ಹೋಗುವ ಸಂದರ್ಭದಲ್ಲಿ ಬಸ್ಸುಗಳ ಸಂಖ್ಯೆ ಕಡಿಮೆ ಇರುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಎದುರಿಸುವಂತಾಗಿದೆ ಎಂದಿದ್ದಾರೆ.
ಪ್ರತಿಭಟನೆ ಎಚ್ಚರ: ಕೂಡಲೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ಸುಗಳ ವ್ಯವಸ್ಥೆಯನ್ನು ಸರಿಯಾದ ಸಮಯಕ್ಕೆ ಮತ್ತು ಹೆಚ್ಚಿನ ಬಸ್ಸಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಕೆಎಸ್ಆರ್ ಟಿಸಿ ಡಿಪೋ ಮುಂದೆ ಉಗ್ರವಾದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ಪ್ರಮುಖರಾದ ಎಸ್. ಗಿರೀಶ್, ಚೇತನ್ ಕೆ., ಶ್ರೀಜಿತ್, ಮಂಜುನಾಥ್, ಲೋಹಿತ್, ಮಾನಸ, ಪ್ರಫುಲ್, ವಿನಯ್ ಸೇರಿದಂತೆ ಹಲವರು ಇದ್ದರು.