ಗುಣಮಟ್ಟದ ಶಿಕ್ಷಣ ಪಡೆಯಲು ವಿಫಲ
ಸೊರಬ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ನಡುವೆ ಇರುವ ಪೈಪೋಟಿಯಿಂದ ಬಡ ಹಾಗೂ ಮಧ್ಯಮ ವರ್ಗದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಪಡೆಯಲು ಹಿನ್ನಡೆ ಉಂಟಾಗುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಮೆಹಬೂಬ್ ತಿಳಿಸಿದರು. ಮಂಗಳವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಣ ಹಕ್ಕು ಕಾಯ್ದೆ ಸಹಾಯಹಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಶಿಕ್ಷಣ ಹಕ್ಕು ಕಾಯ್ದೆ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ವರದಾನವಾಗಿದೆ ಎಂದ ಅವರು, ರಾಜ್ಯದೆಲ್ಲೆಡೆ ಸಮರ್ಪಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದಿಂದ ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರ ಆದೇಶದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಮಾಹಿತಿ ತಲುಪಿಸಲು ಮನೆ ಮನೆಗೆ ಭೇಟಿ ನೀಡಿ ಅರ್ಜಿ ನಮೂನೆ ಫಾರಂಗಳನ್ನು ಭರ್ತಿ ಮಾಡಿಸಲು ರಾಜ್ಯವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶಿಕಾರಿಪುರ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಪಪಂ ಸದಸ್ಯ ಉಮೇಶ್, ಸುಧಾಕರ ಕುಗ್ವೆ, ಕಾರ್ಯದರ್ಶಿ ಕಿರಣ್ ಕುಮಾರ್, ಕರುಣಾಕರ ಎಂ. ಯಡಗೊಪ್ಪ, ಮುಖಂಡರಾದ ಸೈಯದ್ ನಜೀರ್, ಮುಕ್ತಿಯಾರ್ ಅಹ್ಮದ್, ಆರ್. ಮನವೇಲ್ ಇದ್ದರು.