ಮಾರಿಕಾಂಬಾ ಜಾತ್ರೆ ಸಿದ್ಧತೆ ಪರಿಶೀಲನೆ
ಕ.ಪ್ರ.ವಾರ್ತೆ ಸಾಗರ ಫೆ. 12
ಶ್ರೀ ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ಪಟ್ಟಣದ ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ತಿಳಿಸಿದರು.
ಫೆ.18ರಿಂದ ಪ್ರಾರಂಭವಾಗುವ ಶ್ರೀ ಮಾರಿಕಾಂಬಾ ಜಾತ್ರೆಯ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜನರಿಗೆ ಶುದ್ಧವಾದ ಕುಡಿಯುವ ನೀರು ನೀಡುವುದು ಸರ್ಕಾರದ ಪ್ರಥಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ನಿಗಾವಹಿಸಬೇಕು ಎಂದರು.
ಜಾತ್ರೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಮೆಸ್ಕಾಂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಎಲ್ಲ ಕ್ರಮ ಕೈಗೊಂಡಿದೆ. ಜಾತ್ರೆ ಸಂದರ್ಭದಲ್ಲಿ ಅಲ್ಲಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಬೇರೆ ಬೇರೆ ಭಾಗಗಳಿಂದ ಲಕ್ಷಾಂತರ ಜನರು ಪಾಲ್ಗೊಳ್ಳುವುದರಿಂದ ರಕ್ಷಣಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಲಾಗುವುದು. ಅಗತ್ಯ ಇರುವ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ನಿಟ್ಟಿನಲ್ಲಿ ರಕ್ಷಣಾ ಇಲಾಖೆ ಕ್ರಮ ಕೈಗೊಳ್ಳಬೇಕು. ಜಾತ್ರಾ ಸಮಿತಿಯು ಜಾತ್ರೆ ಮುಗಿದ ತಕ್ಷಣ ಸಾರ್ವಜನಿಕರಿಗೆ ಲೆಕ್ಕಪತ್ರ ನೀಡಿ, ಸಮಿತಿಯನ್ನು ನೋಂದಾವಣೆ ಮಾಡಿಸಿ, ಮುಜರಾಯಿ ಕೈಗೆ ಹೋಗುವುದರಿಂದ ತಪ್ಪಿಸುವ ಜವಾಬ್ದಾರಿ ವ್ಯವಸ್ಥಾಪಕ ಸಮಿತಿ ಮೇಲೆ ಇದೆ ಎಂದರು.
ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್. ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಬಿ. ಗಿರಿಧರರಾವ್, ಖಜಾಂಚಿ ನಾಗೇಂದ್ರ ಕುಮಟಾ, ಸಂಚಾಲಕರಾದ ಪುರುಷೋತ್ತಮ, ತಾರಾಮೂರ್ತಿ, ಬಾಲಕೃಷ್ಣ ಗುಳೇದ್, ಸುಂದರಸಿಂಗ್, ಬಸವರಾಜ್, ಭಾಸ್ಕರ್, ಕರುಣಾಕರ, ನಗರಸಭೆ ಸದಸ್ಯ ತೀ.ನ. ಶ್ರೀನಿವಾಸ್ ಹಾಜರಿದ್ದರು.