ಇಂದಿನಿಂದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ
ಸಾಗರ: ಇಲ್ಲಿನ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.22 ರಿಂದ ಫೆ.24ರವರೆಗೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಫೆ.22ರಂದು ಮಧ್ಯಾಹ್ನ 2ಗಂಟೆಗೆ ಕುಸ್ತಿ ಪಂದ್ಯಾವಳಿಯನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಶಾಸಕರಾದ ಮಧು ಬಂಗಾರಪ್ಪ, ಅಪ್ಪಾಜಿಗೌಡ, ಶಾರದ ಪೂರ್ಯಾನಾಯ್ಕ, ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಜಿಲ್ಲಾಧಿಕಾರಿ ವಿಫುಲ್ ಬನ್ಸಾಲ್, ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ ಪೈಲ್ವಾನರು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಸ್ತಿಯಲ್ಲಿ ಜಯಗಳಿಸಿದ ಪೈಲ್ವಾನರಿಗೆ 4 ಬೆಳ್ಳಿಗದೆ, 101 ಬೆಳ್ಳಿ ಪದಕ, ಪರ್ಸಿಬಳೆ, ಅಖಾಡ ಬಳೆ ಜೊತೆಗೆ ಆಕರ್ಷಕ ನಗದು ಬಹುಮಾನವನ್ನು ನೀಡಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕುಸ್ತಿ ಸಮಿತಿ ಸಂಚಾಲಕ ಸುಂದರಸಿಂಗ್ ಹಾಗೂ ಸಹ ಸಂಚಾಲಕರಾದ ಅಶೋಕ್ ಹಾಗೂ ಶಶಿಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.