ಶಿಕ್ಷಣ ಕ್ಷೇತ್ರದ ಆದ್ಯತೆ ವೃದ್ಧಿಸಲಿ: ಕುಲಪತಿ
ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ ಜ.3
ಭಾರತದಲ್ಲಿ ಬೇರೆ ಕ್ಷೇತ್ರದಲ್ಲಿ ಬದಲಾವಣೆಯಾದಷ್ಟು ಶಿಕ್ಷಣ ಕ್ಷೇತ್ರದಲ್ಲಿ ಆಗಿಲ್ಲ. ಆದರಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಅಗತ್ಯವಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಎಸ್.ಎ. ಬಾರಿ ತಿಳಿಸಿದರು.
ಕುವೆಂಪು ವಿಶ್ವವಿದ್ಯಾನಿಲಯದ ಶಿಕ್ಷಣ ನಿಕಾಯ ಶುಕ್ರವಾರ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ. ಪದವಿಯ ಸೆಮಿಸ್ಟರ್ ಸ್ಕೀಂಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ 2 ದಿನಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಶೈಕ್ಷಣಿಕ ಸಾಧನೆ: ದೇಶದಲ್ಲಿ 25 ವರ್ಷಗಳಿಂದ ಉದ್ದಿಮೆ, ತಂತ್ರಜ್ಞಾನ, ಆರ್ಥಿಕ ವ್ಯವಸ್ಥೆಗಳಲ್ಲಿ ಅನೇಕ ಬದಲಾಣೆಗಳಾಗಿವೆ. ಆದರೆ, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅಷ್ಟಾಗಿ ಕಂಡುಬಂದಿಲ್ಲ. ಬದಲಾವಣೆ ಹೊಂದಿದಲ್ಲಿ ಮಾತ್ರ ಒಂದು ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಈ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸರ್ವತೋಮುಖವಾಗಿ ಅಭಿವೃದ್ಧಿ ಪಡಿಸಬೇಕು ಎಂದರು.
ದೇಶ ಅಭಿವೃದ್ಧಿ ಆಗಬೇಕಾದರೆ ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನದ ಅಳವಡಿಕೆ, ಉದಾರೀಕರಣ, ಹೊಸ ಅವಿಷ್ಕಾರ ಹಾಗೂ ಸಂಶೋಧನೆಗಳು ನಡೆಯುವ ಅಗತ್ಯವಿದೆ. ಶಿಕ್ಷಕ ತನ್ನ ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ಕ್ರಿಯಾಶೀಲತೆ ಹಾಗೂ ಉದ್ಯೋಗಶೀಲತಾ ಮನೋಭಾವ ಬೆಳೆಸುವ ಜವಾಬ್ದಾರಿ ಹೊಂದಿರುತ್ತಾನೆ. ಆದರಿಂದ ಆತ ಮೊದಲು ವಿದ್ಯಾರ್ಥಿಗಳಿಗೆ ಕಲಿಸುವ ಸೂಕ್ತ ವಿಧಾನದ ಬಗ್ಗೆ ಅರಿವಿರಬೇಕು ಎಂದರು.
ಸೆಮಿಸ್ಟರ್: ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸುವ ಸಲುವಾಗಿ ಕಾರ್ಯಾಗಾರ ಆಯೋಜಿಸಲಾಗಿದೆ. ಈ ವರ್ಷದಿಂದ ಬಿ.ಇಡಿ.ಯಲ್ಲಿ ವಾರ್ಷಿಕ ಪರೀಕ್ಷಾ ಪದ್ಧತಿ ಬದಲಾಗಿ ಸೆಮಿಸ್ಟರ್ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ವಿವಿ ಕಾರ್ಯೋನ್ಮುಖವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನ ಎಂಇಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಗಣೇಶ್ ಭಟ್ಟ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಪ್ರೊ. ಜೆ.ಎಲ್. ಪದ್ಮನಾಭ್, ಕುವೆಂಪು ವಿವಿ ಡೀನ್ ಡಾ. ಪ್ರಕಾಶ್ ಮತ್ತಿತರರು ಇದ್ದರು.