ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಿ
ಸಾಗರ: ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಯಿಂದ ಸಿಗುವ ಮಾನಸಿಕ ನೆಮ್ಮದಿ ಹಣ, ಸಂಪತ್ತಿನಿಂದ ಸಿಗುವುದಿಲ್ಲ ಎಂದು ಉಪವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಹೇಳಿದರು. ಇಲ್ಲಿನ ಸೇವಾ ಸಾಗರ ಶಾಲೆಯ ಅಜಿತ ಸಭಾಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಬಾಲಭವನ ಸೊಸೈಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಕ್ಕಳ ನಾಟಕೋತ್ಸವವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ರಂಗಭೂಮಿ ಮಕ್ಕಳನ್ನು ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಹೆಚ್ಚು ಪ್ರಬುದ್ಧಗೊಳಿಸುತ್ತದೆ. ಓದಿನಲ್ಲಿ ಏಕಾಗ್ರತೆ ಹಾಗೂ ಸಂಸ್ಕಾರವನ್ನು ನೀಡುವ ಇಂತಹ ಚಟುವಟಿಕೆಗಳಲ್ಲಿ ಮಕ್ಕಳು ತೊಡಗಿಕೊಳ್ಳುವಂತೆ ಸೂಕ್ತ ಸಂದರ್ಭದಲ್ಲಿ ಪ್ರೋತ್ಸಾಹ ನೀಡಬೇಕು. ಮಕ್ಕಳ ಕಲಿಕೆಯ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ರಂಗಭೂಮಿ ಹೆಚ್ಚು ಸೂಕ್ತ ಎಂದು ಅಭಿಪ್ರಾಯಪಟ್ಟರು. ಸೇವಾಸಾಗರ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಎನ್.ನಾರಾಯಣಮೂರ್ತಿ ಮಾತನಾಡಿದರು. ಪತ್ರಕರ್ತರ ಸಂಘದ ಅಧ್ಯಕ್ಷ ಹಿತಕರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜಿ. ಜೋಯಪ್ಪ, ರಂಗಕಮರ್ ಸಿ.ಟಿ. ಬ್ರಹ್ಮಚಾರ್ ಹಾಜರಿದ್ದರು.