28ರಂದು ಮಕ್ಕಳ ಸಾಹಿತ್ಯ ಸಮ್ಮೇಳನ
ಸಾಗರ: ಜ.28ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ನಗರಸಭೆ ಆವರಣದ ಗಾಂಧಿ ಮೈದಾನದಲ್ಲಿ ಎರಡನೇ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಶನಿವಾರ ಕರೆಯಲಾಗಿದ್ದ ಅಧಿಕಾರಿಗಳು ಹಾಗೂ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಪಂ ಅಧ್ಯಕ್ಷ ಹರೀಶ್ ಗಂಟೆ, ಮಕ್ಕಳಲ್ಲಿರುವ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಭೆ ಹೊರತರುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನದ ಪಾತ್ರ ಪ್ರಮುಖವಾಗಿದೆ. ಮಕ್ಕಳಲ್ಲಿ ಸುಪ್ತವಾಗಿರುವ ಭಾವನೆಗಳಿಗೆ ನೀರೆರೆದು ಅದು ಮೊಳಕೆಯೊಡೆಯುವಂತೆ ಸಮ್ಮೇಳನಗಳು ಮಾಡುವುದರಿಂದ ಅರ್ಥಪೂರ್ಣವಾಗಿ ಸಮ್ಮೇಳನ ನಡೆಸಲಾಗುವುದು ಎಂದು ಹೇಳಿದರು. ಪರಿಷತ್ತಿನ ಅಧ್ಯಕ್ಷ ವಿ.ಟಿ. ಸ್ವಾಮಿ, ಸಮ್ಮೇಳನದಲ್ಲಿ ತಾಲೂಕಿನ 5 ಸಾವಿರ ಮಕ್ಕಳನ್ನು ಪಾಲ್ಗೊಳ್ಳುವಂತೆ ವಿನಂತಿ ಮಾಡಲಾಗಿದೆ. ಸಮ್ಮೇಳನವನ್ನು ಪೂರ್ಣವಾಗಿ ಮಕ್ಕಳೇ ನಿರ್ವಹಿಸಲಿದ್ದು, ವಿವಿಧ ಗೋಷ್ಠಿಗಳಲ್ಲಿ ಮಕ್ಕಳು ಪ್ರಬಂಧ ಮಂಡಿಸಲಿದ್ದಾರೆ ಎಂದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ. ಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಲಿಂಗಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರಿಷತ್ ಪದಾಧಿಕಾರಿಗಳು ಇದ್ದರು.