ಇಬ್ಬರು ಪೇದೆ ಅಮಾನತು
ಶಿವಮೊಗ್ಗ: ಎರಡು ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿ ಸೇವೆಯಿಂದ ಅಮಾನತುಗೊಂಡಿದ್ದಾರೆ.
ನಗರದ ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ವರದಿಯಾದ ಸ್ಫೋಟಕ ವಸ್ತು ಪ್ರಕರಣ ಮತ್ತು ಬ್ರೌನ್ ಶುಗರ್ ಪ್ರಕರಣಗಳಲ್ಲಿ ಸೆರೆ ಸಿಕ್ಕ ಪೊಲೀಸರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಣ್ಣಾನಗರದ ವ್ಯಾಪಾರಿಯೊಬ್ಬರ ಮನೆಯಲ್ಲಿ ಸ್ಫೋಟಕ ವಸ್ತುಗಳ ಬ್ಯಾಗ್ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಮುಖ್ಯ ಪೇದೆ ಇಸ್ಮಾಯಿಲ್ ಅವರನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಬ್ರೌನ್ ಶುಗರ್ ಜಾಲದೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ಭದ್ರಾವತಿ ಹಳೇನಗರ ಠಾಣೆ ಪೇದೆ ಜೈಕುಮಾರ್ನ್ನು ಸಸ್ಪೆಂಡ್ ಮಾಡಲಾಗಿದೆ ಎಂದರು.
ನ್ಯಾಯಾಂಗ ವಶ: ಪ್ರತ್ಯೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಈ ಇಬ್ಬರು ಪೊಲೀಸರನ್ನು ಈಗಾಗಲೇ ಬಂಧಿಸಲಾಗಿದೆ. ಈಗಾಗಲೇ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು.