ಯೋಜನೆ ಸಮರ್ಪಕ ಜಾರಿಗೆ ಆಗ್ರಹ
ಶಿವಮೊಗ್ಗ: ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ರಾಹುಲ್ ಗಾಂಧಿ ಬ್ರಿಗೇಡ್ ಸದಸ್ಯರು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಅರ್ಪಿಸಿದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ ಬಿಪಿಎಲ್ ಕುಟುಂಬ ಸದಸ್ಯರು, ನರೇಗಾ ಕಾರ್ಮಿಕರು, ಬೀಡಿ ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರದ ಕಾರ್ಮಿಕರಿಗೆ ಅನ್ವಯವಾಗಲಿದೆ.
ಈ ಯೋಜನೆಯಡಿ ನೋಂದಣಿಯಾದ ಕುಟುಂಬದ ಮುಖ್ಯಸ್ಥ ಹಾಗೂ ನಾಲ್ವರು ಸದಸ್ಯರಿಗೆ ವಾರ್ಷಿಕ ರು. 30,000 ವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ 2013ನೇ ಸಾಲಿನವರೆಗೆ 3.29 ಲಕ್ಷ ಮಂದಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಆದರೆ, ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಬ್ರಿಗೇಡ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಪರಿಣಾಮ ಅನುಷ್ಠಾನ: ಕೂಡಲೇ ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕೆ ಜಿಲ್ಲಾಡಳಿತ ಮುಂದಾಗಬೇಕು. ಎಲ್ಲಾ ತಾಲೂಕು, ಗ್ರಾಪಂ, ನಗರಸಭೆ, ಪಾಲಿಕೆ ವ್ಯಾಪ್ತಿಯಲ್ಲಿ ಯೋಜನೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವ ಜೊತೆಗೆ ಫಲಾನುಭವಿಗಳನ್ನು ನೋಂದಣಿ ಮಾಡಿಸಬೇಕು ಹಾಗೂ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಬೇಕೆಂದು ಒತ್ತಾಯಿಸಿದರು.
ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ವಹಿಸಿದರೆ ಸಂಘಟನೆಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಮನವಿ ನೀಡುವ ಸಂದರ್ಭದಲ್ಲಿ ರಮೇಶ್ ಹೆಗ್ಡೆ, ಶ್ರೀಜಿತ್, ದೇವೇಂದ್ರಪ್ಪ, ಚೇತನ್ ಇದ್ದರು.