ಕಿಮ್ಮನೆ ಮನವೊಲಿಕೆ: ದಸಂಸ ಧರಣಿ ನಿಲುಗಡೆ
ಶಿವಮೊಗ್ಗ: ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 6 ದಿನದಿಂದ ನಡೆಯುತ್ತಿದ್ದ ಆಹೋರಾತ್ರಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಅವರು ಧರಣಿ ಸ್ಥಳಕ್ಕೆ ಆಗಮಿಸಿ ಒಂದು ತಾಸುಗಳ ಕಾಲ ಚರ್ಚೆ ನಡೆಸಿ ಅವರ ಮನಮೊಲಿಸಿದ ಹಿನ್ನಲೆಯಲ್ಲಿ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನುದಾನ ಬಳಕೆ ಕುರಿತಂತೆ ತನಿಖೆ ನಡೆಸುವುದಾಗಿ ಭರವಸೆ ನೀಡಿದ ಅವರು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರನ್ನು ಮುಂಬಯಿಗೆ ಕಳುಹಿಸಿ ಪ್ರತಿಮೆ ನಿರ್ಮಾಣ ಯಾವ ಹಂತದಲ್ಲಿದೆ ಎಂದೂ ಪರಿಶೀಲಿಸುವುದಾಗಿ ಹೇಳಿದರು.ಪ್ರತಿಭಟನೆ ವಾಪಸ್: ಇದಕ್ಕೆ ಸ್ಪಂದಿಸಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಎಂ. ಗುರುಮೂರ್ತಿ, ಸಚಿವರ ಭರವಸೆ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆಯುತ್ತೇವೆ. ಆದರೆ ಬೇಡಿಕೆ ಈಡೇರಿಸುವದು ವಿಳಂಬವಾದರೆ ಮತ್ತೆ ಪ್ರತಿಭಟನೆ ಆರಂಭಿಸುತ್ತೇವೆ ಎಂದರು.
ಚರ್ಚೆ ಸಂದರ್ಭದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ವಿಫುಲ್ ಬನ್ಸಲ್, ಸಿಇಓ ಸಸಿಕಾಂತ್ ಸೆಂಥಿಲ್, ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಸೇರಿದಂತೆ ಹಲವರು ಇದ್ದರು.