ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಹಕರಿಸಿ
ಕ.ಪ್ರ.ವಾರ್ತೆ , ಶಿವಮೊಗ್ಗ , ಜ. 26
ರಾಷ್ಟ್ರೀಯ ಸ್ವಾಸ್ಥ್ಯಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಸ್ವಾಸ್ಥ್ಯಬಿಮಾ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವ ಬಡತನ ರೇಖೆಗಿಂತ ಕೆಳಗಿನ 3,28,158 ಕುಟುಂಬಗಳು ಹಾಗೂ 2013 ಮಾರ್ಚ್ನಲ್ಲಿ ಕನಿಷ್ಠ 15 ದಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರು ಈ ಯೋಜನೆ ವ್ಯಾಪ್ತಿಗೆ ಬರುತ್ತಿದ್ದು, ಈ ಎಲ್ಲರಿಗೂ ಯೋಜನೆಯ ಅನುಕೂಲ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯಾಧಿಕಾರಿಗಳು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಐಸಿಐಸಿಐ ಲೊಂಬರ್ಡ್ ಜನರಲ್ ಇನ್ಶೂರೆನ್ಸ್ ಕಂಪನಿ ಸಹಯೋಗದಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ವ್ಯಾಪ್ತಿಗೆ ಬರುವ ಎಲ್ಲ ಇಲಾಖೆಗಳು ಅನುಷ್ಠಾನಕ್ಕೆ ಸಹಕರಿಸಬೇಕು ಎಂದರು.
ಫೆಬ್ರವರಿ ಮೊದಲ ವಾರದಿಂದ 90 ದಿನಗಳ ಕಾಲ ಪ್ರತಿ ಗ್ರಾಮದಲ್ಲೂ ನೋಂದಣಿ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದಲ್ಲಿ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಲ್ಲಿ ನೋಂದಣಿ ನಡೆಯಲಿದೆ. ನಂತರ ಎಲ್ಲ ತಾಲೂಕುಗಳಲ್ಲೂ ನಡೆಯಲಿದೆ ಎಂದರು.
ಜಿಲ್ಲಾ ಪಂಚಾಯ್ತಿ ಸಿಇಓ ಸಸಿಕಾಂತ್ ಸೆಂಥಿಲ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಿವಣ್ಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಕಾಂತಮ್ಮ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಜಪ್ಪ ಉಪಸ್ಥಿತರಿದ್ದರು.