ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಎನ್‌ಎಸ್ಸೆಸ್ ಶಿಬಿರದಿಂದ ಸಾಂಘಿಕ ಮನೋಭಾವ

Lingaraj Badiger
Updated On : 30 Jan 2014, 10:25 am

ಹೊಸನಗರ: ಎನ್‌ಎಸ್‌ಎಸ್ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಅವರಲ್ಲಿ ಸಾಂಘಿಕ ಮನೋಭಾವ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಜ್ಯೋತಿ ಚಂದ್ರಮೌಳಿ ಅಭಿಪ್ರಾಯಪಟ್ಟರು.
ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲಗೇರಿಮಂಡ್ರಿ ಸರ್ಕಾರಿ ಶಾಲೆಯ ಆವರಣದಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಹಮ್ಮಿಕೊಂಡ 7 ದಿನಗಳ ಎನ್‌ಎಸ್‌ಎಸ್  ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಂಡು ತಮ್ಮ ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿವೆ. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಅಧ್ಯಯನ ಮಾಡಿ ವಿದ್ಯಾರ್ಥಿಗಳು ಅವುಗಳಿಗೆ ಪರಿಹಾರೋಪಾಯ ಕಂಡುಹಿಡಿಯಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರುಣಾಕರ ಮಾತನಾಡಿ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಶಿಬಿರದಲ್ಲಿ ಪಾಲ್ಗೊಂಡು ಇಲ್ಲಿ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ತಾಲೂಕು ಪಂಚಾಯಿತಿ ಸದಸ್ಯರಾದ ನಿರ್ಮಲಾ ಗಣೇಶ್, ಹರಿದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ.ವಾಸು, ಅಲಗೇರಿಮಂಡ್ರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜಪ್ಪ, ಶಾಲೆಯ ಮುಖ್ಯ ಶಿಕ್ಷಕ ಹರೀಶ ಭಟ್, ಶಿಬಿರಾಧಿಕಾರಿ ಕೆ.ಸಿ.ಸೌಮ್ಯ, ಸಹ ಶಿಬಿರಾಧಿಕಾರಿ ಅರುಣ್, ಪ್ರಶಾಂತ್, ಸುಧಾಕರ್ ಮುಂತಾದವರು ಇದ್ದರು.
--
ಫೆ.6ರಂದು ಡಿಸಿ ಕಚೇರಿ ಎದುರು ಪ್ರತಿಭಟನೆ
ಸಾಗರ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಡಕೆ ಬೆಳೆ ನಿಷೇಧ ಸಂಬಂಧ ಸಲ್ಲಿಸಿರುವ ಪ್ರಸ್ತಾವನೆಯನ್ನು ಹಿಂದಕ್ಕೆ ಪಡೆಯಬೇಕು ಮತ್ತು ಗೋರಕ್‌ಸಿಂಗ್ ವರದಿಯಂತೆ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರ ಸಾಲಮನ್ನಾ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಫೆ.6ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಡಕೆ ಬೆಳೆಗಾರರ ಸಂಘದ ವತಿಯಿಂದ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಜಯಂತ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ಬೆಳೆ ನಿಷೇಧ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರದ ಆರೋಗ್ಯ ಸಚಿವಾಲಯದ ಪರವಾಗಿ ಅಡಕೆ ಆರೋಗ್ಯಕ್ಕೆ ಹಾನಿಕರವಾಗಿದ್ದು, ಅದನ್ನು ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.
ಕರ್ನಾಟಕವೇ ವಕೀಲರನ್ನು ನೇಮಿಸಲಿ: ಕೇಂದ್ರ ಸರ್ಕಾರ ಕೂಡಲೇ ತಾನು ಸಲ್ಲಿಸಿದ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್‌ನಿಂದ ವಾಪಸ್ ಪಡೆಯಬೇಕು. ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಿಂದ ಅಡಕೆ ಬೆಳೆಗಾರರಿಂದಲೇ ಪಡೆದ ಅಡಕೆಯನ್ನು ಸಂಶೋಧನೆಗೆ ಒಳಪಡಿಸಿ, ಆ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕು.
ಅಡಕೆ ಬೆಳೆಗಾರರ ಪರವಾಗಿ ಕರ್ನಾಟಕ ಸರ್ಕಾರವೇ ಹಿರಿಯ ವಕೀಲರನ್ನು ಸುಪ್ರೀಂ ಕೋರ್ಟ್‌ನಲ್ಲಿ ನೇಮಿಸಿ ಅಡಕೆ ಪರವಾಗಿ ವಾದ ಮಂಡಿಸಬೇಕು ಎಂದು ಒತ್ತಾಯಿಸಿದರು.
ಧರಣಿಯಲ್ಲಿ ಎಲ್ಲಾ ಅಡಕೆ ಬೆಳೆಗಾರರು ಹಾಗೂ ರೈತಪರ ಸಂಘಟನೆಗಳು, ರಾಜಕೀಯ ಪಕ್ಷಗಳ ಪ್ರಮುಖರು, ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವ.ಶಂ. ರಾಮಚಂದ್ರ ಭಟ್, ಟಿಎಪಿಎಂಸಿಎಸ್ ಅಧ್ಯಕ್ಷ ಎಂ.ಸಿ. ರತ್ನಾಕರ ಗೌಡ, ಪ್ರಮುಖರಾದ ಎಂ.ಕೆ. ತಿಮ್ಮಪ್ಪ, ರಮೇಶ್ ಎಂ.ಬಿ., ತಿಮ್ಮಪ್ಪ, ಎನ್.ಟಿ. ಮಹಾಬಲೇಶ್ವರ, ರಾಧಾಕೃಷ್ಣ, ವಿರೇಶ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement