ಸಾಗರ ತಾಪಂ ಅಧ್ಯಕ್ಷೆ ಜ್ಯೋತಿ ಉಪಾಧ್ಯಕ್ಷರಾಗಿ ಸೈಯದ್ ಆಯ್ಕೆ
ಸಾಗರ: ಇಲ್ಲಿನ ತಾಲೂಕು ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜ್ಯೋತಿ ಮುರಳೀಧರ್ ಹಾಗೂ ಉಪಾಧ್ಯಕ್ಷರಾಗಿ ಸೈಯದ್ ಇಬ್ರಾಹಿಂ (ಬಾಬಣ್ಣ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಡಾ.ಉದಯಕುಮಾರ್ ಶೆಟ್ಟಿ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷೆ ಜ್ಯೋತಿ ಮುರಳೀಧರ್ ಮಾತನಾಡಿ, ತಾಲೂಕು ವ್ಯಾಪ್ತಿಯಲ್ಲಿ ಸೌಲಭ್ಯವಂಚಿತ ಜನರಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತೇನೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶೌಚಾಲಯ ಹಾಗೂ ನೈರ್ಮಲ್ಯೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಉದ್ಯೋಗ ಖಾತ್ರಿ ಯೋಜನೆ ಕೂಲಿ ಹಣ ಈತನಕ ಬಿಡುಗಡೆಯಾಗಿಲ್ಲ. ಇದರಿಂದಾಗಿ ಜನರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದನ್ನು ಕಾಗೋಡು ತಿಮ್ಮಪ್ಪ ಅವರ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು. ಅರಣ್ಯಹಕ್ಕು ಸಮಿತಿಯ ಮೂಲಕ ಅರಣ್ಯವಾಸಿಗಳಿಗೆ ಹಕ್ಕುಪತ್ರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದರು.
ಉಪಾಧ್ಯಕ್ಷ ಸೈಯದ್ ಇಬ್ರಾಹಿಂ, ಕಾಂಗ್ರೆಸ್ ಪಕ್ಷ ನನ್ನ ಮೇಲೆ ವಿಶ್ವಾಸ ಇರಿಸಿ ಉಪಾಧ್ಯಕ್ಷ ಸ್ಥಾನ ನೀಡಿದೆ. ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೂಲಕ ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದರು.
ತಾಲೂಕು ಪಂಚಾಯ್ತಿ ಸದಸ್ಯರಾದ ಹರೀಶ್ ಗಂಟೆ, ಮಹಾಬಲೇಶ್ವರ ಕುಗ್ವೆ, ಪ್ರಕಾಶ್, ಶ್ವೇತಾ ಉಮೇಶ್, ಗೌರಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ರತ್ನಾಕರ ಹೊನಗೋಡು, ಸುಮಂಗಲ ರಾಮಕೃಷ್ಣ, ಲಲಿತಾ ನಾರಾಯಣ್, ಎಪಿಎಂಸಿ ಅಧ್ಯಕ್ಷ ಕೆ.ಹೊಳೆಯಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಭೀಮನೇರಿ ಶಿವಪ್ಪ, ಮಲ್ಲಿಕಾರ್ಜುನ ಹಕ್ರೆ ಹಾಜರಿದ್ದರು.