ಅವಾಚ್ಯ ನಿಂದನೆ, ಕತ್ಯವ್ಯಕ್ಕೆ ಅಡ್ಡಿ: ಕ್ರಮಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ
ಶಿವಮೊಗ್ಗ: ಸರ್ಕಾರಿ ನೌಕರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸುವಂತಹ ಘಟನೆ ನಡೆಯುತ್ತಿದ್ದು, ಕುಂಸಿ ಹೋಬಳಿ ಕೋಣೆ ಹೊಸೂರು ಕರಡಿ ಬೆಟ್ಟದಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಶಾಖೆ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಿದರು.ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹಾಗೂ ಅರಣ್ಯ ರಕ್ಷಕ ಶಿವರಾಜ್ ಇನ್ನಿತರರು ಕರಡಿ ಬೆಟ್ಟದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ 12 ಜನರ ತಂಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕುಂಸಿ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು. ಸರ್ಕಾರಿ ನೌಕರರ ತೀವ್ರ ಕಾರ್ಯ ಒತ್ತಡಗಳ ನಡುವೆಯೂ ಸಹ ಭಯದಿಂದ ಕಾರ್ಯನಿರ್ವಹಿಸ ಬೇಕಾಗಿದೆ. ಸರ್ಕಾರಿ ನೌಕರರಿಗೆ ಸೂಕ್ತ ರಕ್ಷಣೆ ನೀಡಬೇಕು, ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸುತ್ತಲೇ ಇವೆ. ಇದರಿಂದ ನೌಕರರು ಕೆಲಸ ಮಾಡಲು ಆಗುತ್ತಿಲ್ಲ. ಸರ್ಕಾರದ ಯೋಜನೆಗಳನ್ನು ನಿರ್ಭೀತಿಯಿಂದ ಅನುಷ್ಠಾನಗೊಳಿಸಲು ಸಾದ್ಯವಿಲ್ಲದಂತಾಗಿದೆ. ಹಾಗಾಗಿ ಸರ್ಕಾರಿ ನೌಕರರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಮನವಿ ಮಾಡಿದರು. ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಪ್ರಧಾನ ಕಾರ್ಯದರ್ಶಿ ಮೋಹನ್‌ಕುಮಾರ್, ನಾಗಭೂಷಣ್ ಇತರರು ಇದ್ದರು.