ಆಂಜನೇಯ ಹೇಳಿಕೆಗೆ ವೀರಶೈವ ಮಹಾಸಭಾ ಆಕ್ಷೇಪ
ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಅವರು ವೀರಶೈವ ಮಹಾಸಭಾ ಸಂಘಟನೆಯ ವಿರುದ್ಧ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ, ತತ್‌ಕ್ಷಣವೇ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಮುಖಂಡ ರುದ್ರಮುನಿ ಸಜ್ಜನ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಅಖಿಲ ಭಾರತ ವೀರಶೈವ ಮಹಾಸಭಾವು ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯವಾದ ವೀರಶೈವ ಸಮಾಜಕ್ಕೆ ಕಾಂಗ್ರೆಸ್ ಆದ್ಯತೆ ನೀಡದಿರುವುದರ ವಿರುದ್ಧ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ ಸಚಿವ ಆಂಜನೇಯ ಅವರು ಪ್ರತಿಕ್ರಿಯೆ ನೀಡುವ ವೇಳೆ, ವೀರಶೈವರ ಒತ್ತಡಕ್ಕೆ ಮಣಿಯುವುದಿಲ್ಲ. ವೀರಶೈವ ಮಹಾಸಭಾ ಯಾವುದು ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಖಂಡನಾರ್ಹ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೂಡಲೇ ಸಚಿವ ಆಂಜನೇಯ ಅವರು ನೀಡಿರುವ ಹೇಳಿಕೆಯ ಕುರಿತಂತೆ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಮಹಾಸಭಾದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಬೆನಕಪ್ಪ, ವಿರೂಪಾಕ್ಷಪ್ಪ, ಮಲ್ಲಿಕಾರ್ಜುನಪ್ಪ ಮೊದಲಾದವರಿದ್ದರು.