ಪರಿಸರ ಜಾಗೃತಿ ಕಾರ್ಯಾಗಾರ
ಶಿವಮೊಗ್ಗ: ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ದ್ರವ ಮತ್ತು ಘನ ತ್ಯಾಜ್ಯಗಳ ವಿಂಗಡಣೆ ಮತ್ತು ವೈಜ್ಞಾನಿಕ ವಿಲೇವಾರಿ ಬಗ್ಗೆ ಮಂಡಳಿಯ ಪರಿಸರ ಅಧಿಕಾರಿಗಳಾದ ಆರ್. ಗುರುಮೂರ್ತಿ ವಿವರಿಸಿದರು.
ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆವರಣದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ಶುಶ್ರೂಷಕರು ಮತ್ತು ಸಾರ್ವಜನಿಕರಿಗೆ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ (ನಿರ್ವಹಣೆ ಮತ್ತು ನಿಭಾವಣೆ) ನಿಯಮ, 1998ರ ಬಗ್ಗೆ ಅರಿವು ಮೂಡಿಸಲು ಪರಿಸರ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಲೇಪಾಕ್ಷಿ, ತಮ್ಮ ಸಂಸ್ಥೆಯಲ್ಲಿ ವೈದ್ಯಕೀಯ ತ್ಯಾಜ್ಯ ವಸ್ತುಗಳ ವೈಜ್ಞಾನಿಕ ನಿರ್ವಹಣೆ ಹಾಗೂ ವಿಲೇವಾರಿಗೆ ಕೈಗೊಂಡಿರುವ ಕ್ರಮದ ವಿಷಯವಾಗಿ ಸಭೆಗೆ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಪರಿಸರ ಕನ್ಸಲ್ಟೆಂಟ್ ರಾಮಾಚಾರ್ ಜೋಯಿಸ್, ಸಿಮ್ಸ್ ಕಮ್ಯುನಿಟಿ ಮೆಡಿಸಿನ್ ವಿಭಾಗದ ಡಾ.ಪ್ರಶಾಂತ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ನೆರೆದಿದ್ದರು.
ಸ್ಥಾನಿಕ ವೈದ್ಯಾಧಿಕಾರಿ ಡಾ. ಶಿವಯೋಗಿ ಮತ್ತು ಮಂಡಳಿಯ ಉಪ ಪರಿಸರ ಅಧಿಕಾರಿ ಎಸ್.ಸಿ. ಸುರೇಶ್ ಅವರು ಉಪಸ್ಥಿತರಿದ್ದರು. ಚಂದ್ರಮತಿ ಹೆಗ್ಗಡೆ ಸ್ವಾಗತಿಸಿದರು.