ಯುವ ಸಮೂಹದಲ್ಲಿ ಸೈಬರ್ ಕ್ರೈಂ ಹೆಚ್ಚಳ
ಹೊಸನಗರ: ಮೊಬೈಲ್, ಇಂಟರ್ನೆಟ್ ದುರ್ಬಳಕೆ ಪರಿಣಾಮ ಇಂದಿನ ಯುವ ಸಮುದಾಯದಲ್ಲಿ ಸೈಬರ್ ಕ್ರೈಂ ಹೆಚ್ಚುತ್ತಿದೆ ಎಂದು ನ್ಯಾಯಾಧೀಶ ಎ.ಸಮೀವುಲ್ಲಾ ಆತಂಕ ವ್ಯಕ್ತಪಡಿಸಿದರು.
ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ತಾಲೂಕು ಕಾನೂನು ನೆರವು ಸಮಿತಿ, ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ಮಹಿಳೆ ಮತ್ತು ಮಕ್ಕಳ ಹಕ್ಕು ಹಾಗೂ ಆರೋಗ್ಯ ಸಂರಕ್ಷಣೆ ಬಗ್ಗೆ ಕುರಿತ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆ ಹಾಗೂ ಮಕ್ಕಳ ಮೇಲಿನ ಸೈಬರ್ ಕ್ರೈಂ ಸಾಬೀತಾದರೆ ಕನಿಷ್ಠ 5ರಿಂದ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಇದರ ಜತೆಗೆ ಅತ್ಯಾಚಾರ, ಮಹಿಳಾ ದೌರ್ಜನ್ಯ ಪ್ರಕರಣದ ದುರುಪಯೋಗಗಳ ಬಗ್ಗೆ ಎಚ್ಚರ ವಹಿಸುವಂತೆ ಮನವಿ ಮಾಡಿದರು. ದುರುದ್ದೇಶ ಪೂರಿತವಾಗಿ ದೌರ್ಜನ್ಯ ಪ್ರಕರಣ ದಾಖಲು ಮಾಡದಿರುವಂತೆ ಅವರು ಕೋರಿದರು.
ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಕರುಣಾಕರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ರಾಯ್ ಜೋಸೆಫ್, ಎ.ಎಂ. ಲೋಕೇಶ್, ಎಚ್.ಎನ್. ಗುರುಕಿರಣ್ ಹಾಗೂ ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿಜಯ್ ಹೊಳೆಗದ್ದೆ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಮಾಹಿತಿ ನೀಡಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಸೌಮ್ಯ ಸ್ವಾಗತಿಸಿದರು. ಪ್ರವೀಣ್ ಹಾಗೂ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.