'ಭಾರತೀಯ ಸಂಸ್ಕೃತಿ ಅಳವಡಿಸಿಕೊಳ್ಳಿ'
ಕ.ಪ್ರ.ವಾರ್ತೆ ತಿಪಟೂರು ಏ.7
ಭಾರತೀಯ ಸಂಸ್ಕೃತಿ, ಆಚಾರ, ವಿಚಾರ ಹಾಗೂ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಕನ್ನಡದ ಪೂಜಾರಿ ಎಂಬ ಖ್ಯಾತಿಯ ಹಿರೇಮಗಳೂರು ಕಣ್ಣನ್ ತಿಳಿಸಿದರು.
ನಗರದ ಪಲ್ಲಾಗಟ್ಚಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ಪ್ರತಿಭಾ ಶ್ರೀ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತೀಯ ಸಂಸ್ಕೃತಿ ಇಂದು ನಶಿಸಿ ಹೋಗುತ್ತಿದ್ದು, ಉಳಿಸಿ ಬೆಳೆಸುವತ್ತ ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.
ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಎನ್.ನಾರಾಯಣಸ್ವಾಮಿ ಮಾತನಾಡಿ ಕ್ರೀಡೆಯಿಂದ ಜೀವನೋತ್ಸಾಹ, ಸ್ನೇಹ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಜೊತೆಗೆ ರಾಷ್ಚ್ರೀಯ ಭಾವೈಕ್ಯತೆ ವೃದ್ಧಿಯಾಗುತ್ತದೆ. ಆದ್ದರಿಂದ ಕ್ರೀಡೆಗೆ ಪ್ರತಿಯೊಬ್ಬರೂ ಆಸಕ್ತಿ ಹಾಗೂ ಉತ್ಸಾಹದಿಂದ ಪಾಲ್ಗೊಂಡು ಪ್ರಗತಿ ಸಾಧಿಸಬೇಕೆಂದರು.ಸಂಸ್ಥೆಯ ಉಪಾಧ್ಯಕ್ಷ ಟಿ.ಯು.ಜಗದೀಶಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್ ಮುಂತಾದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿವಿಧ ವಿಷಯಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ನೃತ್ಯ ತರಬೇತಿದಾರ ಶಿವಸ್ವಾಮಿ, ಕೆ.ಎಸ್. ಸುರೇಶ್ ಅವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲ ಪ್ರೊ.ಸೈಯದ್ ಮುಷ್ತಾಕ್ ಅಹಮದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಧ್ಯಾಪಕ ಎಂ.ಕೆ. ಕುಮಾರಸ್ವಾಮಿ ವಾಚಿಸಿದರು. ಸಂಸ್ಥೆ ಉಪಾಧ್ಯಕ್ಷ ಚಂದ್ರಶೇಖರ್, ಕನ್ನಡ ಪ್ರಾಧ್ಯಾಪಕ ಡಾ.ಜಿ.ಎಸ್.ರಮೇಶ್, ಕ್ರೀಡಾ ವಿಭಾಗದ ಮುಖ್ಯಸ್ಥ ಬಿ.ಎಸ್.ನಂಜೇಗೌಡ ಸೇರಿದಂತೆ ಪ್ರಾಧ್ಯಾಪಕರು, ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ವೇತಾ ಪ್ರಾರ್ಥಿಸಿ, ಹಿರಿಯ ಗ್ರಂಥಪಾಲಕ ಜಿ. ತಿಪ್ಪೇಸ್ವಾಮಿ ಸ್ವಾಗತಿಸಿ, ಟಿ.ಜಿ. ಚಂದ್ರಶೇಖರ್ ವಂದಿಸಿದರು.