ಜಯಚಂದ್ರ ವಿರುದ್ಧ ಸತ್ಯ ಗಾಂಧಿಗಿರಿ
ಕ.ಪ್ರ. ವಾರ್ತೆ ತುಮಕೂರು ಏ.13
ಶಿರಾದ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎನ್ನಲಾದ ಶಿರಾ ತಾಲೂಕಿನ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಅಭ್ಯರ್ಥಿ ಬಿ. ಸತ್ಯನಾರಾಯಣ ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ಶಿರಾ ತಾಲೂಕಿನಲ್ಲಿ 3 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ವಿವಿಧ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಸರ್ಕಾರಿ ಹುದ್ದೆಯಲ್ಲಿದ್ದರೂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಪಚ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿ. ಸತ್ಯನಾರಾಯಣ್ ಚುನಾವಣಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಸತ್ಯನಾರಾಯಣ ಅವರು ಶಿರಾ ಗ್ರಾಮಾಂತರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ರವಿ, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕರಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜ್‌ಕುಮಾರ್, ಕಂದಾಯ ನಿರೀಕ್ಷಕ ರಾಜೇಶ್ ಮತ್ತಿತರರು ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.
ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿರುವ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ವರ್ಗಾವಣೆ ಮಾಡಿ: ನಂತರ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಿ. ಸತ್ಯನಾರಾಯಣ ಶಿರಾ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳೀಯರಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರ ಮರ್ಜಿಗೊಳಗಾಗಿ ಅವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಇವರ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಚುನಾವಣೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬುದು ನಮ್ಮ ಒತ್ತಾಸೆ. ಆದರೆ ವಿವಿಧ ಇಲಾಖೆಗಳ ಅಧಿಕಾರಿಗಳು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ತಮ್ಮ ಕೈಕೆಳಗಿನ ಅಧಿಕಾರಿಗಳಿಗೆ ಕಾಂಗ್ರೆಸ್ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ. ಇದು ತಪ್ಪು. ಈ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಈ ರೀತಿಯ ಕೃತ್ಯದಲ್ಲಿ ತೊಡಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಾ. ಎಂ.ಆರ್. ಹುಲಿನಾಯ್ಕರ್, ಜಿ.ಪಂ. ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಿ ಮುಂತಾದವರು ಉಪಸ್ಥಿತರಿದ್ದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರು ಒಂದು ವೇಳೆ ಸರ್ಕಾರಿ ಅಧಿಕಾರಿಗಳು ಈ ರೀತಿಯ ಕೃತ್ಯದಲ್ಲಿ ತೊಡಗಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಮಾಜಿ ಸಚಿವ ಸತ್ಯನಾರಾಯಣ ಅವರು ತಮ್ಮ ಪ್ರತಿಭಟನೆ ಹಿಂಪಡೆದರು.