ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕಾರ
ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾ.ಪಂಗೆ ಸೇರಿರುವ ಶಕುನಗಿರಿಗೊಲ್ಲರಹಟ್ಟಿಯಲ್ಲಿ ಕಳೆದ 6 ತಿಂಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೀರಿಗಾಗಿ ಹಾಹಾಕಾರ ಉಂಟಾಗಿದೆ. ಆದ್ದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಇತ್ತ ಗಮನಹರಿಸಿ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸದಿದ್ದರೆ ಮೇ 5ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
ಕಡು ಬೇಸಿಗೆಯಾದ್ದರಿಂದ ಗ್ರಾಮದಲ್ಲಿರುವ 600 ಅಡಿಯ 2 ಕೊಳವೆ ಬಾವಿಗಳಲ್ಲೂ ನೀರಿಲ್ಲದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು 2-3 ಕಿ.ಲೋ ಮೀಟರ್ ನಡೆದು ಹೊಗಿ ಪಕ್ಕದ ತೋಟದಲ್ಲಿ ಮಾಲೀಕರನ್ನು ಕಾಡಿ ಬೇಡಿ ನೀರು ತರುವ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಈ ಭಾಗದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದ್ದು, ಜಾನುವಾರುಗಳು ನೀರು ಮೇವಿಲ್ಲದೆ ಸೊರಗುತ್ತಿವೆ. ಈ ಬಗ್ಗೆ ಹಲವು ಬಾರಿ ಗ್ರಾ.ಪಂ ಮತ್ತು ತಾಲೂಕು ಆಡಳಿತಕ್ಕೆ ಮನವಿ ನೀಡಿದರೂ ಸಹ ಏನೂ ಪ್ರಯೋಜನವಾಗಿಲ್ಲ. ಮೇ 1ರೊಳಗೆ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟಿಸುವುದಲ್ಲದೆ, ಮೇ 5ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದೆಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.