ರಸ್ತೆಯಲ್ಲೇ ಸಸಿನೆಟ್ಟು ಪ್ರತಿಭಟನೆ
ಕ.ಪ್ರ.ವಾರ್ತೆ ಶಿರಾ ಆ. 1
ನಗರದ ದರ್ಗಾ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿ 4 ರವರೆಗೆ ಇರುವ ಈ ಹಿಂದಿನ ಹೆದ್ದಾರಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಿಸುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ರಸ್ತೆಯಲ್ಲೇ ಸಸಿನೆಟ್ಟು ಪ್ರತಿಭಟಿಸಿದರು.
ಸಂಘದ ಅಧ್ಯಕ್ಷ ಉಮೇಶ್‌ಗೌಡ ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಮತ್ತು ಸಾರ್ವಜನಿಕರು ಓಡಾಡಲು ತುಂಬಾ ತೊಂದರೆಯಾಗುತ್ತಿದೆ. ರಸ್ತೆಯಲ್ಲಿನ ಈ ಗುಂಡಿಗಳನ್ನು ಮುಚ್ಚದೆ ಹಾಗೆ ಬಿಟ್ಟಿರುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಈ ಹಿಂದಿನ ರಸ್ತೆಯು ರಾಷ್ಟ್ರೀಯ ಹೆದ್ದಾರಿ ಆಗಿದ್ದು ಇದಕ್ಕೆ ಬೈಪಾಸ್ ರಸ್ತೆ ನಿರ್ಮಾಣವಾಗಿರುವುದರಿಂದ ಈ ರಸ್ತೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ರಸ್ತೆ ಯಾರಿಗೆ ಸೇರಿದ್ದು ಈ ರಸ್ತೆಯಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುತ್ತಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ರಸ್ತೆ ನಿರ್ವಹಣೆ ತಮ್ಮ ಇಲಾಖೆಗೆ ಸೇರುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆ ಎನ್ನುತ್ತಾರೆ. ನಗರಸಭೆಯವರನ್ನು ವಿಚಾರಿಸಿದರೆ ಅವರೂ ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟಂತಹ ಈ ರಸ್ತೆಯನ್ನು ತಾವು ಸರಿಪಡಿಸಲು ಸಾಧ್ಯವಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ರಾಷ್ಟ್ರೀಯ ಪ್ರಾಧಿಕಾರದವರು ಈ ರಸ್ತೆಯನ್ನು ನಗರಸಭೆಗೆ ಬಿಟ್ಟುಕೊಟ್ಟಿದ್ದು ಅವರೇ ಇದನ್ನು ದುರಸ್ತಿಪಡಿಸಬೇಕೆನ್ನುತ್ತಿದ್ದಾರೆ. ಇದೇ ರೀತಿ ಒಬ್ಬರ ಮೇಲೊಬ್ಬರು ಸಬೂಬು ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ. ಇಂತಹ ಹದಗೆಟ್ಟ ರಸ್ತೆಯಲ್ಲಿ ಓಡಾಡುವುದು ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ತಕ್ಷಣವೇ ಸಂಬಂಧಪಟ್ಟ ಇಲಾಖೆಯವರು ಈ ರಸ್ತೆಯನ್ನು ಇನ್ನು ಒಂದು ವಾರದಲ್ಲಿ ದುರಸ್ತಿ ಮಾಡಿಸಿ, ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ಕಾರ್ಯದರ್ಶಿ ರಘು, ಸುರೇಶ್, ಎಚ್.ಸಿ.ಉಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.