ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಆದ್ಯತೆ: ಕೆ.ಷಡಕ್ಷರಿ
ತಿಪಟೂರು: ತಿಪಟೂರಿನ ಶೈಕ್ಷಣಿಕ ಹಿನ್ನೆಲೆಯನ್ನು ಅವಲೋಕಿಸಿದಾಗ ಸುತ್ತಮುತ್ತಲಿನ ಜಿಲ್ಲೆಯ ಹಾಗೂ ತಾಲೂಕು ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ಕೆ.ಷಡಕ್ಷರಿ ಸಂತಸ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸಂಖ್ಯೆಗನುಗುಣವಾಗಿ ಅವರ ಮೂಲ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ವಿಭಾಗಕ್ಕೆ ಪ್ರತ್ಯೇಕ ಕೊಠಡಿಗಳನ್ನು ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತೆ ಎಂದ ಅವರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ತುರ್ತಾಗಿ ಕಾಲೇಜಿಗೆ ಕರೆಸಿ ಸಿ.ಡಿ.ಸಿ.ಖಾತೆಯ ಹಣದಿಂದ ತಾತ್ಕಾಲಿಕ ಕೊಠಡಿಗಳ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಉಳಿದ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಪ್ರಾಂಶುಪಾಲರಿಗೆ ಭರವಸೆ ನೀಡಿದರು.
ಕರ್ತವ್ಯ: ಸಿಡಿಸಿ ಸಮಿತಿ ಸದಸ್ಯರಾದ ಸದಾಶಿವರಾವ್ ಮಾತನಾಡಿ ಕಾಲೇಜಿನಲ್ಲಿ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಿ ವೈಜ್ಞಾನಿಕವಾಗಿ ಕಾಲೇಜಿಗೆ ಏನು ಅವಶ್ಯಕತೆ ಇದೆ ಎಂಬುದನ್ನು ತಿಳಿದು ಆ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಸಿಡಿಸಿ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಸೋಮಶೇಖರ್ ಮಾತನಾಡಿ ಈ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳೇ ಹೆಚ್ಚಾಗಿರುವುದರಿಂದ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ಮತ್ತು ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಶಾಸಕರಿಗೆ ಮನವಿ ಮಾಡಿದರು.
ಪ್ರಾಂಶುಪಾಲ ಡಾ.ಜಯದೇವಪ್ಪ ಮಾತನಾಡಿ ಈ ಕಾಲೇಜಿನಲ್ಲಿ ಒಟ್ಟು 4 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿ ವಿದ್ಯಾರ್ಥಿನಿಯರೇ ಹೆಚ್ಚಾಗಿರುವುದರಿಂದ ಮೂಲಸೌಕರ್ಯಗಳ ಬಗ್ಗೆ ಶೀಘ್ರವಾಗಿ ಬಗೆಹರಿಸಬೇಕೆಂದು ಸಮಿತಿಗೆ ಮನವಿ ಮಾಡಿದರು. ಸಿಡಿಸಿ ಸಮಿತಿಯ ಸದಸ್ಯರಾದ ನಿಂಗಪ್ಪ, ರಾಮದಾಸ್, ಸುಜಿತ್ ಭೂಷಣ್, ಧನಂಜಯ್, ಟಿ.ವೈ.ರೇಣುಕ,ದರ್ಶನ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.