ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲವೆಂದು ಆರೋಪಿಸಿ ಪ್ರತಿಭಟನೆ
ಗುಬ್ಬಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲವೆಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕಾಲೇಜನ್ನು ಬಹಿಷ್ಕರಿಸಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾವಿರ ಕೋಟಿ ರು. ಅನುದಾನ ನೀಡುತ್ತಿದೆ. ಆದರೆ ಸರ್ಕಾರ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಶೌಚಾಲಯ ಇನ್ನಿತರೆ ಯಾವುದೆ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತಿದ್ದಾರೆ. ಈ ಬಗ್ಗೆ ಸಂಭದ ಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರು ಈವರೆಗೂ ಯಾವುದೆ ಸಮಸ್ಯೆ ಬಗೆಹರಿಸಿಲ್ಲವೆಂದು ಎ.ಬಿ.ವಿ.ಪಿ.ಘಟಕದ ಕಾರ್ಯದರ್ಶಿಅರುಣ್ ಕುಮಾರ್ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಪುಡಾರಿಗಳ ಸಂಖ್ಯೆ ಹೆಚ್ಚಿದ್ದು ಬಸ್ಗಾಗಿ ಕಾಯುವ ವಿದ್ಯಾರ್ಥಿನಿಯರ ಮೇಲೆ ರ್ಯಾಗಿಂಗ್ ನಡೆಯುತ್ತಿದೆ ಇದರಿಂದ ಸಾಕಷ್ಟು ವಿದ್ಯಾರ್ಥಿನಿಯರು ಬಸ್ ನಿಲ್ದಾಣಕ್ಕೆ ಹೋಗಲು ಹಿಂದೇಟು ಹಾಕುವಂತ ಪರಿಸ್ಥಿತಿ ಉಂಟಾಗಿದೆ. ಸಂಬಂದಿಸಿದ ಅಧಿಕಾರಿಗಳು ಗ್ರಾಮೀಣ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸ ಬೇಕೆಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಎ.ಬಿ.ವಿ.ಪಿ. ಘಟಕದ ಮುಖಂಡರಾದ ಹರೀಶ್, ವಿಶ್ವನಾಥ್, ಹಸನ್ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.