ಮತದಾರರ ಪಟ್ಟಿಯಿಂದ ಬಿಟ್ಟ ಹೆಸರು ಸೇರಿಸಲು ಸೂಕ್ತ ಕ್ರಮ
ತುಮಕೂರು: ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿರುವ ಹೆಸರುಗಳನ್ನು ಸೇರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು
ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಘಟಕಗಳ ಮುಖಂಡರು, ಮಾಜಿ ಶಾಸಕರು ಭಾಗವಹಿಸಿದ್ದು ಈ ತೀರ್ಮಾನ ಕೈಗೊಳ್ಳಲಾಯಿತು. ಹೆಚ್ಚುವರಿ ಬೂತ್‌ಗಳನ್ನು ತೆರೆಯಲು ಸಂಬಂಧ ಪಟ್ಟ ಚುನಾವಣಾ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿ ಅಧಿಕಾರಿಗಳಿಂದ ಮಾರ್ಗದರ್ಶನ ಪಡೆದು ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ತಿಳಿಸಿದರು.
ಡಿ.10 ರಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರೆದಿರುವ ಸಭೆಗೆ ಕಡ್ಡಾಯವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು ಹಾಜರಾಗಬೇಕು. ಅಲ್ಲದೇ 15 ರಂದು ಮುಖ್ಯಮಂತ್ರಿಗಳು ವಿವಿಧ ಕಾರ್ಯಕ್ರಮಗಳಿಗೆ ತುಮಕೂರಿಗೆ ಆಗಮಿಸಿದ್ದು ಜಿಲ್ಲೆಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಯಿತು.