ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲ: ಆಕ್ರೋಶ

Srinivasa Murthy VN
Updated On : 2 Feb 2013, 11:01 am

ಗುಬ್ಬಿ: ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ ಸಮಸ್ಯೆ ಬಗೆಹರಿಸುವಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ಆರೋಪಿಸಿ  ಕುನ್ನಾಲ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಜೀಗನಹಳ್ಳಿ ಮತ್ತು ಗೊಲ್ಲರಹಟ್ಟಿ ಗ್ರಾಮದ ಜನತೆ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.
ತಾಲೂಕಿನ ಜೀಗನಹಳ್ಳಿ ಮತ್ತು ಗೊಲ್ಲರಹಟ್ಟಿ ಗ್ರಾಮಗಳಲ್ಲಿ 250 ಕುಟುಂಬಗಳಿದ್ದು ಸಮರ್ಪಕ ಕುಡಿಯುವ ನೀರು ದೊರೆಯದೆ ತೋಟದ ಬಾವಿಗಳನ್ನು ಅವಲಂಬಿಸಬೇಕಾದ ಪರಿಸ್ಧಿತಿ ನಿರ್ಮಾಣವಾಗಿದ್ದು ಗ್ರಾಮ ಪಂಚಾಯ್ತಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಳ್ಳದೆ ಜನತೆ ಪರದಾಡುವಂತಾಗಿದೆ.   ಈ ಎರಡೂ ಗ್ರಾಮಗಳ ಜನತೆ ಕುಡಿಯುವ ನೀರಿಗಾಗಿ ಪಡುತ್ತಿರುವ ಕಷ್ಟ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಿ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಬತ್ತಿದ ಕೊಳವೆಬಾವಿ: ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಕುಸಿತದಿಂದ ಬಹುತೇಕ ಕೊಳವೆ ಬಾವಿಗಳು ಸಂಪೂರ್ಣ ಬತ್ತಿ ಹೋಗಿದ್ದು ತೋಟದ ಬಾವಿಗಳಲ್ಲೂ ನೀರು ಸಿಗದಂತಹ ಸ್ಧಿತಿ ನಿರ್ಮಾಣವಾಗಿದೆ. ಕಳೆದ 2-3 ವರ್ಷಗಳಿಂದಲೂ ಈ ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದರೂ ಸಹ ನೀರಿನ ಸಮಸ್ಯೆ ನಿವಾರಿಸುವಲ್ಲಿ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಪ್ರತಿಭಟನಾ ನಿರತರು ಕೊಡಲೇ ಕುಡಿವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಅಂತರ್ಜಲ ಕುಸಿತದಿಂದ ಈವರೆಗೆ ಕೊರೆದಿರುವ ಕೊಳವೆ ಬಾವಿಗಳಲ್ಲಿ ನೀರು ಬಾರದೆ ನೀರಿಗಾಗಿ ಪರದಾಡುತ್ತಿದ್ದರೂ ಸಹ ಗ್ರಾಮ ಪಂಚಾಯ್ತಿಯವರು ಯಾವುದೇ ಪರ್ಯಾಯ ಕ್ರಮಗಳನ್ನು ಕೈಗೊಳ್ಳದೇ ಇರುವುದು ವಿಷಾದಕರ ಎಂದ ಪ್ರತಿಭಟನಾಕಾರರು ಕನಿಷ್ಠ ಪಕ್ಷ ಟ್ಯಾಂಕರ್ ಮೂಲಕವಾದರೂ ಕುಡಿಯುವ ನೀರು ಪೂರೈಕೆ ಮಾಡುವತ್ತ ಮುಂದಾಗಬೇಕೆಂದರು.  ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕುಡಿಯುವ ನೀರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಯೋಜನೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement