ಮತದಾನಕ್ಕೆ ಶೇ. 55 ರಷ್ಟು ಯುವಜನತೆ ಉದಾಸೀನ
ತುಮಕೂರು: ದೇಶದಲ್ಲಿ ಮತದಾನಕ್ಕೆ ಶೇ. 55 ರಷ್ಟು ಯುವಜನತೆ ಉದಾಸೀನ ತೋರುತ್ತಿರುವುದು ದೇಶದ ದೌರ್ಭಾಗ್ಯ ಎಂದು ಜಿಲ್ಲಾ ಸತ್ರ ಹಾಗೂ ಪ್ರಧಾನ ನ್ಯಾಯಾಧೀಶ ಎಚ್.ಬಿ. ಪ್ರಭಾಕರ ಶಾಸ್ತ್ರಿ ವಿಷಾದಿಸಿದರು.
ಅವರು ತುಮಕೂರಿನ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಚುನಾವಣಾ ಆಯೋಗದ ಸಂಯುಕ್ತಾಶ್ರಯದಲ್ಲಿ ಏರ್ಪಾಟಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಮತದಾನಕ್ಕೆ ಜನತೆ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಬಹುಸಂಖ್ಯಾತ ಮತದಾರರು ಚುನಾವಣೆಯಲ್ಲಿ ಮತದಾನ ಮಾಡಲು ನಿರಾಸಕ್ತಿ ತೋರುತ್ತಿರುವ ಪರಿಣಾಮ, ಅಲ್ಪಸಂಖ್ಯೆಯ ಮತದಾರರು ಚುನಾಯಿಸಿದ ವ್ಯಕ್ತಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಜನ ನಾಯಕರೆಂದು ಬಿಂಬಿಸಲ್ಪಡುತ್ತಿದ್ದಾರೆ. ಇದು ದೇಶದ ದೌರ್ಭಾಗ್ಯ. ಅರ್ಹರನ್ನು ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಆದರೆ ಹಕ್ಕನ್ನು ಚಲಾಯಿಸದೆ, ಬೇಜವಾಬ್ದಾರಿ ಪ್ರದರ್ಶಿಸಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಯಶಸ್ಸಿಗೆ ತೊಡರುಗಾಲಾಗಿದೆ. ಶೇ. 100 ರಷ್ಟು ಮತದಾನವಾದರೆ ಏನಾದರೂ ಬದಲಾವಣೆ ಸಾಧ್ಯ ಎಂದರು.
ಸಂವಿಧಾನದ ಕನಸುಗಳ ಪ್ರತೀಕ: ಸಂವಿಧಾನ ನಮ್ಮೆಲ್ಲರ ಕನಸುಗಳ ಪ್ರತೀಕ. ಸಂವಿಧಾನ ನೀಡಿರುವ ಪ್ರಜಾಪ್ರಭುತ್ವ ಜನತೆಯ ಆಶೋತ್ತರಗಳ ಪ್ರತೀಕ. ಸಂವಿಧಾನದ ಕನಸನ್ನು ನನಸು ಮಾಡಲು ಸಮರ್ಥ ನಾಯಕರ ಆಯ್ಕೆ ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.
ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲ ಮತದಾರರು ಮತದಾನದಲ್ಲಿ ಪಾಲ್ಗೊಳ್ಳಬೇಕು. ತಮ್ಮ ಹಕ್ಕನ್ನು ಚಲಾಯಿಸಬೇಕು. ಆ ಮೂಲಕ ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಯಶಸ್ಸಿಗೆ ಸಹಕರಿಸಬೇಕು ಎಂದು ಪ್ರಭಾಕರ ಶಾಸ್ತ್ರಿಗಳು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ 5 ಜನರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.
ಜಿಲ್ಲಾಧಿಕಾರಿ ಆರ್.ಕೆ. ರಾಜು, ಜಿಪಂ ಸಿಇಓ ಗೋವಿಂದರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ದೊಡ್ಡಪ್ಪ, ಉಪವಿಭಾಗಾಧಿಕಾರಿ ನಕುಲ್, ತಹಸೀಲ್ದಾರ್ ಅಹೋಬಲಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಎಂ. ಸಣ್ಣ ಮುದ್ದಯ್ಯ, ಎಂಪ್ರೆಸ್ ಪಪೂ ಕಾಲೇಜಿನ ಪ್ರಿನ್ಸಿಪಾಲ್ ಬಿ. ಮರುಳಯ್ಯ, ಜೆಸಿಂತಾ ಡಿಸೋಜಾ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಎಂಪ್ರೆಸ್ ಕಾಲೇಜಿನ ವಿದ್ಯಾರ್ಥಿನಿಯರಿಂದ ಟೌನ್‌ಹಾಲ್‌ನಿಂದ ಡಾ. ಗುಬ್ಬಿ ವೀರಣ್ಣ ರಂಗಮಂದಿರದವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.