ತಮ್ಮ ಕಾಲ ಮೇಲೆ ತಾವೇ ಕಲ್ಲೆತ್ತಿ ಹಾಕಿಕೊಂಡ ಬೋಪಯ್ಯ
ತುಮಕೂರು: ಸ್ಪೀಕರ್ ಕೆ.ಜಿ. ಬೋಪಯ್ಯ ತಮ್ಮ ಕಾಲ ಮೇಲೆ ತಾವೇ ಕಲ್ಲೆತ್ತಿ ಹಾಕಿಕೊಂಡರೆ ಯಾರೇನು ಮಾಡಲು ಸಾಧ್ಯ ಎಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಅವರ ಮಾರ್ಮಿಕ ಪ್ರಶ್ನಿಸಿದ್ದಾರೆ.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ರಾಜಕೀಯ ಘಟನಾವಳಿಗಳಿಗೆ ಸಂಬಂಧಿಸಿದಂತೆ ಮಾತನಾಡಿದರು. ಸ್ಪೀಕರ್ ಬೋಪಯ್ಯ ತಮ್ಮ ಅಧಿಕಾರ ವ್ಯಾಪ್ತಿಯನ್ನು ಅರಿತು, ನಿಷ್ಪಕ್ಷಪಾತವಾಗಿ ವರ್ತಿಸಬೇಕು. ಆದರೆ ಬೋಪಯ್ಯನವರ ನಡೆ ಸರಿಯಾಗಿಲ್ಲ. ಬೋಪಯ್ಯ ದಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ. ಈಗಾಗಲೇ ಒಂದು ಬಾರಿ ಸುಪ್ರೀಂಕೋರ್ಟ್ನಿಂದ ಶಾಸಕರ ಅನರ್ಹತೆ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದೆ ಛೀಮಾರಿಗೊಳಗಾಗಿದ್ದಾರೆ. ಮತ್ತೆ-ಮತ್ತೆ ತಪ್ಪುಗಳಾದರೆ ಯಾರೂ ಸಹಿಸುವುದಿಲ್ಲ ಎಂದು ಬಸವರಾಜ್ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗಳಲ್ಲಿ ತಮಗೆ ನಂಬಿಕೆಯಿಲ್ಲ. ಜಗದೀಶ್ ಶೆಟ್ಟರ್ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ಕುಮಾರ್ ಪಾತ್ರ ಏನಿದೆಯೋ ಗೊತ್ತಿಲ್ಲ. ಬಿಜೆಪಿ ರಹಸ್ಯಗಳ ಕುರಿತು ತಮಗೆ ಮಾಹಿತಿಯಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದೊಡ್ಡವನಲ್ಲ: ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣನವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನಲ್ಲ. ತಮಗೂ 4 ದಶಕಗಳ ರಾಜಕೀಯ ಅನುಭವವಿದೆ. ತಮ್ಮದು ಪಾರದರ್ಶಕ ಜೀವನ. ತಾವು ಮನೆ ಹಾಳೋ ಮಾಡೋ ಕೆಲಸ ಮಾಡಲ್ಲ. ತಮ್ಮ ರಾಜಿನಾಮೆ ಕೇಳಲು ಯಾರಿಗೂ ಅಧಿಕಾರವಿಲ್ಲ. ತಮ್ಮನ್ನು ಸಂಸದನ ಸ್ಥಾನದಿಂದ ಕಿತ್ತೊಗೆಯಲು ಸಾಧ್ಯವಿಲ್ಲ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.