ನಾಳೆ ಜೆಡಿಎಸ್ ಪ್ರತಿಭಟನೆ
ಮಧುಗಿರಿ: ಶಾಸಕಿ ಅನಿತಾಕುಮಾರಸ್ವಾಮಿ ನೇತೃತ್ವದಲ್ಲಿ ತಾಲೂಕು ಜೆಡಿಎಸ್ ವತಿಯಿಂದ ಶಾಶ್ವತ ನೀರಾವರಿ ಯೋಜನೆ ಸೇರಿದಂತೆ ಕೆಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಗಮನ ಸಳೆಯಲು ಮಧುಗಿರಿಯಲ್ಲಿ ಜ.31ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತುಮಕೂರು ಗೇಟ್ ಬಳಿ ರಸ್ತೆ ತಡೆ ಮತ್ತು ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಬಿ.ಎನ್.ಶಿವಣ್ಣ ತಿಳಿಸಿದ್ದಾರೆ.
ಪಟ್ಟಣದ ಒಕ್ಕಲಿಗರ ಸಂಘದ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಈ ವಿಷಯ ತಿಳಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ಭ್ರಷ್ಟಾಚಾರ ಎಗ್ಗಿಲ್ಲದೆ ಸಾಗಿದ್ದು ಅದೇ ಪಕ್ಷದ 3 ಜನ ಸಿಎಂ ಆದರೂ ಕೂಡ ಅಭಿವೃದ್ಧಿ ಕಡೆ ಗಮನ ಹರಿಸಿಲ್ಲ. ಹಾಗಾಗಿ ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕುಗಳಾದ ಪಾವಗಡ, ಮಧುಗಿರಿ, ಕೊರಟಗೆರೆ ಹಾಗೂ ಶಿರಾ ತಾಲೂಕುಗಳಿಗೆ ಯಾವುದಾದರೂ ಮೂಲದಿಂದ ಶಾಶ್ವತ ನೀರಾವರಿ ಸೌಲಭ್ಯ ಸೇರದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಬರುವ ಆಯ-ವ್ಯಯದಲ್ಲಿ ಹಣ ಮೀಸಲಿಟ್ಟು ಕಾಮಗಾರಿ ಕೈಗೆತ್ತಿಕೊಳ್ಳಲು ಸರ್ಕಾರವನ್ನು ಒತ್ತಾಯಿಸಲಾಗುವುದು. ಈ ಪ್ರತಿಭಟನೆ ಮತ್ತು ರಸ್ತೆ ತಡೆ ಚಳವಳಿಗೆ ಜೆಡಎಸ್ ಎಲ್ಲ ಹಿರಿಯ ಕಿರಿಯ ಮುಖಂಡರು ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಶಿವಣ್ಣ ಮನವಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.