ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರು: ಸಂಭ್ರಮಾಚರಣೆ
ತುಮಕೂರು: ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಹೆಸರನ್ನು ನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಸುಮಾರು 6 ವರ್ಷಗಳಿಂದ ನಿರಂತರವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ಮಾಡಿತ್ತು.
ಅಂದಿನ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಡಲು ಹಸಿರು ನಿಶಾನೆ ತೋರಿಸಿತ್ತು.
ಈ ಹಿನ್ನೆಲೆಯಲ್ಲಿ ಈಗ ಕೆಂಪೇಗೌಡ ಹೆಸರಿಡಲು ಘೋಷಣೆ ಆಗುವುದರ ಮೂಲಕ ನಮ್ಮ ಹೋರಾಟಕ್ಕೆ ಜಯ ಸಂದಿದೆ ಎಂದು ಕರವೇ ಕಾರ್ಯಕರ್ತರು ಸಂಭ್ರಮಿಸಿದರು. ತುಮಕೂರು ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಜಿಲ್ಲಾಧ್ಯಕ್ಷ ವಿಷ್ಣುವರ್ಧನ್, ಆನಂದ್, ಸುನಿಮಾ ಮೂರ್ತಿ, ಅಕ್ಷಯ ಚೌಧರಿ, ಮಂಜುನಾಥ್, ದೀಪು ಟಿ.ಎಲ್. ಇದ್ದರು.