ಶ್ರದ್ಧೆ, ಆಸಕ್ತಿ ಇಲ್ಲದಿದ್ದರೆ ಏನನ್ನೂ ಸಾಧಿಸಲಾಗುವುದಿಲ್ಲ: ನವಲೆ
ತುಮಕೂರು: ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಎಲ್ಲಾ ಐಷಾರಾಮಿ ಸೌಲಭ್ಯಗಳನ್ನು ಒದಗಿಸಿದರೂ ಶ್ರದ್ಧೆ ಮತ್ತು ಆಸಕ್ತಿ ಇಲ್ಲದಿದ್ದರೆ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ಅಖಿಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸುಧೀರ್ ಎಸ್. ನವಲೆ ಅಭಿಪ್ರಾಯಪಟ್ಟರು.
ಅವರು ನಗರದ ಪಾಂಡುರಂಗಸ್ವಾಮಿ ದೇವಸ್ಥಾನದಲ್ಲಿ ಭಾವಸಾರ ಕ್ಷತ್ರಿಯ ಯುವಜನ ಸಂಘ ಆಯೋಜಿಸಿದ್ದ 13ನೇ ವರ್ಷದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚಾಗಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಐಎಎಸ್ ಹಾಗೂ ಐಪಿಎಸ್ ಬಗ್ಗೆ ಆಸಕ್ತಿ ತೋರಿ ಜನಾಂಗದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಪ್ರಥಮ ಭಾವಸಾರ ವಿಶೇಷ ಮಹಿಳಾ ಪೈಲೆಟ್ ಬಗ್ಗೆ ಮಾಹಿತಿ ನೀಡಿದರು. ಪೋಷಕರು ತಮ್ಮ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಯಾವುದರಲ್ಲಿ ಆಸಕ್ತಿ ಇದೆಯೋ ಅದಕ್ಕೆ ತಕ್ಕಂತೆ ಅವರನ್ನು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ 7ನೇ ತರಗತಿ, ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 37 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. 150 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್ ಪುಸ್ತಕಗಳನ್ನು ನೀಡಲಾಯಿತು.