ಸ್ಪರ್ಧಾತ್ಮಕ ಯುಗದಲ್ಲಿ ನಿಮಗೆ ನೀವೇ ಸ್ಪರ್ಧಿ
ಕ.ಪ್ರ.ವಾರ್ತೆ ತುಮಕೂರು ಜೂ. 22
ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ನಿಮಗೆ ನೀವೇ ಸ್ಪರ್ಧಿಗಳು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದಶಇರ್ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜಿನೀಶ್ ಅಭಿಪ್ರಾಯಪಟ್ಟರು.
ಅವರು ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘ ಹಾಗೂ ತಾಲೂಕು ಸರಕಾರಿ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಪ್ರಪಂಚ ಒಂದು ಸಣ್ಣ ಗ್ರಾಮದಂತಾಗಿದೆ. ಎತ್ತರಕ್ಕೆ ಬೆಳೆದಂತೆಲ್ಲಾ ನಮ್ಮ ಪ್ರತಿಸ್ಪರ್ಧಿಗಳು ಯಾರು ಎಂದು ಗೊತ್ತಿರುವುದಿಲ್ಲ.ಇಂತಹ ಸಂದರ್ಭದಲ್ಲಿ ಗೆಲ್ಲಬೇಕೆಂದರೆ ಮೊದಲು ನಮ್ಮಲ್ಲಿ ಆತ್ಮವಿಶ್ವಾಸ ಮೂಡಿಸಿಕೊಳ್ಳಬೇಕು. ಏನಾದರೂ ಸಾಧಿಸಬಲ್ಲೆ ಎಂಬ ಆತ್ಮವಿಶ್ವಾಸ ಮೂಡಿಸಿಕೊಂಡಲ್ಲಿ ಮಾತ್ರ ಯಶಸ್ಸು ಸಾಧ್ಯ. ಹಾಗೂ ಇತರೊಂದಿಗೆ ಸ್ಪರ್ಧೆಗೆ ಇಳಿಯಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿ ದಿಸೆಯಲ್ಲಿಯೇ ಮಕ್ಕಳು ನಿಶ್ಚಿತ ಗುರಿಯೊಂದಿಗೆ ತಮ್ಮ ಅಭ್ಯಾಸವನ್ನು ಆರಂಭಿಸಬೇಕು. ಆಗ ಮಾತ್ರ ಉನ್ನತ ಮಟ್ಟದ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.