ಸಾಮೂಹಿಕ ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಿ
ಕನ್ನಡಪ್ರಭ ವಾರ್ತೆ ತುಮಕೂರು ಜೂ.25
ಮಣಿಪಾಲ್ ವಿಶ್ವವಿದ್ಯಾನಿಲಯದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಜತೆಗೆ ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತ್ವರಿತ ನ್ಯಾಯಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಹಾಗೂ ಸಿಪಿಐ (ಎಂ) ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಚೌಕದಲ್ಲಿ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಚೌಕದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಉದ್ದೇಶಿಸಿ ಸಿಪಿಐ (ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಸೈಯದ್ ಮುಜೀಬ್ ಮಾತನಾಡಿ, ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾನಿಲಯದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಕ್ರಮವನ್ನು ಸಿಪಿಐ(ಎಂ) ತೀವ್ರವಾಗಿ ಖಂಡಿಸುತ್ತದೆ ಮತ್ತು ರಾಜ್ಯ ಸರ್ಕರ ಕೂಡಲೇ ಅತ್ಯಾಚಾರ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಬಂಧಿಸಿಲ್ಲ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಧರ್ಮಸ್ಥಳದ ವಾಸಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳನ್ನು ಇದುವರೆಗೂ ಬಂಧಿಸಲು ಸಾಧ್ಯವಾಗಿಲ್ಲ. ಈಗ ಮಣಿಪಾಲ್ ವಿಶ್ವವಿದ್ಯಾನಿಯದ ವಿದ್ಯಾರ್ಥಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಇದೇ ರೀತಿಯ ಪ್ರಕರಣಗಳು ನಡೆಯುತ್ತಾ ಹೊದರೆ ಸಮಾಜದಲ್ಲಿ ಮಹಿಳೆಯರಿಗೆ ರಕ್ಷಣೆ ಎಲ್ಲಿ ದೊರೆಯುತ್ತದೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಈ ರೀತಿಯ ಕೃತ್ಯಗಳನ್ನು ನಡೆಸುವ ವ್ಯಕ್ತಿಗಳಿಗೆ ಹಾಗೂ ಈ ರೀತಿಯ ಕೃತ್ಯಗಳು ನಡೆಯದಂತೆ ಕಠಿಣ ಕಾನೂನನ್ನು ಜಾರಿಗೆ ತರಬೇಕು ಎಂದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಸುಬ್ರಹ್ಮಣ್ಯ ಮಾತನಾಡಿ ಜಾಗತೀಕರಣದ ನೀತಿಗಳಿಂದ ತಮ್ಮ ವ್ಯಾಪಾರದ ವೃದ್ಧಿಗಾಗಿ ಮಹಿಳೆಯರನ್ನು ಬಳಸಿಕೊಳ್ಳುತ್ತಿರುವುದು ಈ ರೀತಿಯ ಅತ್ಯಾಚಾರ ಪ್ರಕರಣಗಳು ನಡೆಯಲು ಒಂದು ಕಾರಣವಾಗಿದೆ. ಬಹುರಾಷ್ಟ್ರೀಯ ಕಂಪನಿಗಳ ವಸ್ತುಗಳ ಮಾರಾಟವನ್ನು ಹೆಚ್ಚಿಸಿಕೊಳ್ಳಲು ಜಾಹಿರಾತುಗಳಲ್ಲಿ ಮಹಿಳೆಯರನ್ನು ಬಳಸಿಕೊಳ್ಲುವ ರೀತಿಗೆ ಕಡಿವಾಣ ಹಾಕುವ ಅಗತ್ಯವಿದೆ ಎಂದರು.
ಬೆಳಕಿಗೆ ಬಂದಿದೆ: ಮಣಿಪಾಲ್ ವಿದ್ಯಾರ್ಥಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣ ನಡೆದು ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದೆ ಇರುವಾಗಲೇ ಹಾಸನದಲ್ಲಿ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರ ಕಾನೂನಿಗೆ ತಿದ್ದುಪಡಿ ತಂದು ಉಗ್ರಶಿಕ್ಷೆಗೆ ಒಳಪಡಿಸಬೇಕು ಮತ್ತು ಜಿಲ್ಲಾಡಳಿತಗಳು ಈರೀತಿ ಕೃತ್ಯಗಳು ನಡೆಯದಂತೆ ಕ್ರಮಕಗೈಗೊಳ್ಳಬೇಕು ಎಂದರು.
ಪ್ರತಿಭಟನೆಯನ್ನು ಬೆಂಬಲಿಸಿ ಸಿಪಿಐನ ಗಿರೀಶ್ ಮಾತನಾಡಿದರು. ಪ್ರತಿಭಟನೆಯಲ್ಲಿ ಸಿಐಟಿಯುನ ತಾಲೂಕು ಸಹಕಾರ್ಯದರ್ಶಿ ಮುತ್ತುರಾಜ್, ರಾಘವೆಂದ್ರ, ರೇವಣ್ಣ, ಹಮಾಲಿ ಕಾರ್ಮಿಕ ಸಘಘದ ತಿಪ್ಪೇಸ್ವಾಮಿ, ಇಂದ್ರ, ಕಟ್ಟಡ ಕಾರ್ಮಿಕರ ಸಂಘದ ಶಂಕರಪ್ಪ ಎಸ್ಎಫ್ಐನ ಶಿವಣ್ಣ, ದರ್ಶನ್ ಡಿ.ವೈಎಫ್.ಐನ ರಾಘವೇಂದ್ರ. ಎಸ್, ಸಿಪಿಐ(ಎಂ) ನಗರ ಸಮಿತಿಯ ಅಜ್ಜಪ್ಪ ಮುಂತಾದವರು ಉಪಸ್ಥಿತರಿದ್ದರು.